ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ರೆ ಮಕ್ಕಳ ಅಭಿವೃದ್ಧಿಮಕ್ಕಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ: ಶಶಿಧರ ಕೋಸಂಬೆ

KannadaprabhaNewsNetwork | Published : Jan 17, 2025 12:47 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಬಾಲ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ದಲ್ಲಿ ಮಾತ್ರ ಮಕ್ಕಳ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಬಾಲ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ದಲ್ಲಿ ಮಾತ್ರ ಮಕ್ಕಳ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಶಾಲೆಯಲ್ಲಿದೆ ಶಿಕ್ಷಣ ಜತೆಗೆ ರಕ್ಷಣೆ ಎಂಬ ಶಿರ್ಷಿಕೆ ಅಡಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಸಹಭಾಗಿದಾರ ಇಲಾಖೆಗಳ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 3 ವರ್ಷಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಹೆಚ್ ಪ್ರೊಟಲ್ ಪ್ರಕಾರ 1.33 ಸಾವಿರ ಅಪ್ರಾಪ್ತ ಮಕ್ಕಳು ಬಾಲ ಗರ್ಭಿಣಿಯರು ಆಗಿದ್ದಾರೆ. ಇದರ ಅರ್ಥ ಇಷ್ಟೆಲ್ಲ ಮಕ್ಕಳು ಬಾಲ್ಯ ವಿವಾಹಕ್ಕೆ ಒಳಗಾಗಿದ್ದಾರೆ. ಇದು ಬಹಳ ಬೇಸರದ ಸಂಗತಿ. ರಾಜ್ಯದಲ್ಲಿ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಸುಮಾರು 59 ಸಾವಿರ ಅಧಿಕಾರಿಗಳು ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಬಾಲ್ಯ ವಿವಾಹ ತಡೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ, ಯಾರೂ ಮನಸ್ಸು ಮಾಡುತ್ತಿಲ್ಲ ಇದು ದುರ್ದೈವ ಎಂದರು.ಸಾವಿರಾರು ಮಕ್ಕಳು ದಿನ ಬೆಳಗಾದರೆ ದುಡಿಯಲು ಹೋಗುತ್ತಾರೆ. ಆದರೆ, ಯಾರೂ ಆ ಕಡೆ ಗಮನಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ, ಸಹಭಾಗಿತ್ವದಲ್ಲಿ ಸರಣಿ ಸಭೆಗಳನ್ನು ಮಾಡಿ ಮಕ್ಕಳಿಗೆ ಶಾಲೆಗೆ ಕಳುಹಿಸಲು ಕ್ರಮವಹಿಸಬೇಕು ಎಂದರು.ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಶಾಲಾ ಪರಿಸರದಲ್ಲಿ ಪ್ರಾಚಾರ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಯರ ಮೇಲೆ ನಡೆಸಿದ ನಾನಾ ರೀತಿಯ ಲೈಂಗಿಕ ಹಲ್ಲೆ, ದೌರ್ಜನ್ಯದ 3800ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ನ್ಯಾಯಾಧೀಶ ಅರವಿಂದ ಹಾಗರಗಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಕಲಂ 21ಎ ಪ್ರಕಾರ 6 ರಿಂದ 14 ವರ್ಷದ ಒಳಗಿನ ಮಕ್ಕಳಿಗೆ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು. ಹೀಗಾಗಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ಪ್ರಕಾರ ಹೆತ್ತವರು ತನ್ನ ಮಗುವಿಗೆ ಶಾಲೆಗೆ ಕಳುಹಿಸಲು ವಿಫಲಗೊಂಡಲ್ಲಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಂತಹ ಮಕ್ಕಳಿಗೆ ಶಿಕ್ಷಣ ನೀಡುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ತಿಳಿಸಿದರು.ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಬಸಮ್ಮ ಹತ್ತರಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಕೋಳಾರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಹಾಗೂ ಸಹಭಾಗಿದಾರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸೂರ್ಯಕಾಂತ ಬಿರಾದಾರ ವಿಶೇಷ ಉಪನ್ಯಾಸ ನೀಡಿದರು.

Share this article