ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ

KannadaprabhaNewsNetwork | Published : Jul 12, 2024 1:33 AM

ಸಾರಾಂಶ

ಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಧಾರವಾಡ:

ಜನಸಂಖ್ಯೆ ನಿಯಂತ್ರಣದಿಂದ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಗುರುವಾರ ಉದ್ಘಾಟಿಸಿದ ಅವರು, ಭಾರತ 141 ಕೋಟಿ ಜನಸಂಖ್ಯೆ ಹೊಂದಿದೆ. ಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಇಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ ಎಂದರು.

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಡೆಂಘೀ ಅತೀ ವೇಗವಾಗಿ ಹರಡುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ತಮ್ಮ ಆರೋಗ್ಯದ ಎಚ್ಚರ ವಹಿಸಬೇಕು, ಗರ್ಭಿಣಿಯರು ಎಚ್ಚರದಿಂದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕವಿವಿಯ ಎನ್ನೆಸ್ಸೆಸ್‌ ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ.ಬಿ. ದಳಪತಿ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಮೂಲಸೌಕರ್ಯ ಸಮಸ್ಯೆಗಳ ಜತೆಗೆ ವಲಸೆ ಪ್ರಮಾಣವು ಹೆಚ್ಚಳವಾಗುತ್ತಿದೆ. ಪ್ರತಿಯೊಬ್ಬರು ಜನಸಂಖ್ಯಾ ನಿಯಂತ್ರಣವನ್ನು ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಕೆ.ಎಸ್. ಕೌಜಲಗಿ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಚಿತ್ತರಗಿ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ ಭಿತ್ತಿಪತ್ರ ಬಿಡುಗಡೆ ಮಾಡಿದರು. ವಿವಿಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕವಿವಿಯ ಶಿಕ್ಷಣ ಕಾಲೇಜು ಪ್ರಾಚಾರ್ಯ ಪ್ರಭಾ ಎಸ್. ಗುಡ್ಡದಾನ್ವೇರಿ, ಡಾ. ಎನ್.ಎಸ್. ತಳವಾರ ಇದ್ದರು.

Share this article