ಚಳ್ಳಕೆರೆ: ಶೈಕ್ಷಣಿಕ ಅಭಿವೃದ್ಧಿಯ ಮೂಲಕ ದೇಶ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಪ್ರಸ್ತುತ ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಶಿಕ್ಷಣ ಕೊಡುಗೆ ಅಪಾರ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಸಹ ಹೊಸ, ಹೊಸ ಮಾದರಿ ತಯಾರಿಕೆ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತಿರುವುದು ಸಂತಸ ತಂದಿದೆ ಎಂದು ಡಿಡಿಪಿಐ ಎಂ.ಆರ್.ಮಂಜುನಾಥ ಹೇಳಿದರು.
ಗ್ರಾಮೀಣ ಭಾಗದ ಈ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯವನ್ನು ಪ್ರದರ್ಶಿಸಲು ವಸ್ತುಪ್ರದರ್ಶನ ಉತ್ತಮ ವೇದಿಕೆಯಾಗಿದೆ. ಸುತ್ತಮುತ್ತಲ ಹತ್ತಾರು ಗ್ರಾಮಗಳ ನೂರಾರು ವಿದ್ಯಾರ್ಥಿಗಳು ವಿವಿಧ ಮಾದರಿಗಳನ್ನು ಅಚ್ಚುಕಟ್ಟಾಗಿ ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿರುವ ಜ್ಞಾನ ಹಾಗೂ ಜಾಣ್ಮೆ ತಿಳಿದಿದೆ. ಶಿಕ್ಷಕರು ಇಂತಹ ವಿದ್ಯಾರ್ಥಿಗಳಿಗೆ ಹೆಚ್ಚು ಮಾರ್ಗದರ್ಶನ ನೀಡಿದರೆ ಅವರು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ಕೊಡಲು ಸಮರ್ಥರಾಗುತ್ತಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಸುರೇಶ್ ಮಾತನಾಡಿ, ಕ್ರಿಯಾಶೀಲ ಕಾರ್ಯಕ್ರಮಗಳಿಂದ ಮಾತ್ರ ವಿದ್ಯಾರ್ಥಿಗಳ ಕೌಶಲ್ಯ ಪ್ರಗತಿ ಸಾಧ್ಯ. ಕಳೆದ ಆರು ವರ್ಷಗಳಿಂದ ನಿರಂತರವಾಗಿ ವಸ್ತು ಪ್ರದರ್ಶನ ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲಾಗುತ್ತಿದೆ. ವಿಶೇಷವಾಗಿ ಶಿಕ್ಷಣ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಗ್ರಾಮಸ್ಥರು, ಪೋಷಕರು ಹೆಚ್ಚಿನ ಸಹಕಾರ ನೀಡಿದ್ದಾರೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.