- ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ
ಮಹಿಳಾ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಶಕ್ತಿ ತುಂಬಿವೆ ಎಂದು ನ್ಯಾಯವಾದಿ ಮಮತಾ ಹೇಳಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ನಗರದ ಬಸವನಹಳ್ಳಿ ವಿದ್ಯಾಭಾರತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಒಂದು ಹೆಣ್ಣಿನ ಶಕ್ತಿ ಕೇವಲ ಕುಟುಂಬಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಮಹಿಳಾ ಕ್ಷೇತ್ರಗಳಲ್ಲೂ ಮಹಿಳಾ ಸಬಲೀಕರಣ ವಾಗಬೇಕು. ಅವರ ಕುಟುಂಬದ ಆರ್ಥಿಕ ಮಟ್ಟ ಸದೃಢಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಮೂಲಕ ಉಳಿತಾಯ ಮನೋಭಾವಕ್ಕೆ ಆದ್ಯತೆ ನೀಡಿದ್ದು, ಮಹಿಳೆ ಸ್ವಾವಲಂಬಿ ಬದುಕಿಗೆ ಆಸರೆಯಾಗಿದೆ ಎಂದು ತಿಳಿಸಿ, ಈ ಯೋಜನೆಗಳ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಠಿ ಚಿಂತನೆ ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಾ ಮಾತನಾಡಿ, ಸದೃಢ ಆರೋಗ್ಯ ಕಾಪಾಡುವಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಈ ಬಗ್ಗೆ ಸಮಗ್ರ ಮಾಹಿತಿ ನೀಡಿದರು.ಚಿತ್ರದುರ್ಗದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಬಿ.ಗೀತಾ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ಬೆಳೆಸುವಲ್ಲಿ ಮಹಿಳೆ ಬಹಳ ಮುಖ್ಯ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೂರಕ ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವಲ್ಲಿ ಯಶಸ್ವಿಯಾಗಿದೆ ಎಂದರು. ನಗರಸಭೆ ಸದಸ್ಯೆ ರೂಪಾ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗ ಪ್ರಾದೇಶಿಕ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ರತ್ನ ಮೈಪಾಲ್, ಜನಜಾಗೃತಿ ವೇದಿಕೆ ಸದಸ್ಯ ಧರ್ಮರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುಷ್ಪಗುಚ್ಚ ತಯಾರಿಕೆ, ರಂಗೋಲಿ ಸ್ಪರ್ಧೆ, ಪೌಷ್ಠಿಕ ಆಹಾರ ಪ್ರಾತ್ಯಕ್ಷಿತೆ, ಕರಕುಶಲ ವಸ್ತು ಪ್ರದರ್ಶನದ ಜೊತೆಗೆ ಸ್ವಉದ್ಯೋಗ ಮಳಿಗೆಗಳು ಎಲ್ಲರ ಗಮನ ಸೆಳೆದವು. ಸೇವಾ ಕೇಂದ್ರದ ಎಲ್ಲಾ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮಗಳೂರು ತಾಲೂಕು ಯೋಜನಾಧಿಕಾರಿ ರೂಪಾ ಜಿ.ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕ ಪರಿಶೋಧಕರು, ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.27 ಕೆಸಿಕೆಎಂ 1ಚಿಕ್ಕಮಗಳೂರಿನ ಬಸವನಹಳ್ಳಿ ವಿದ್ಯಾಭಾರತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ನ್ಯಾಯವಾದಿ ಮಮತಾ ಉದ್ಘಾಟಿಸಿದರು.