ವಿವಿಧ ಕ್ಷೇತ್ರಗಳ ಅಭಿವೃದ್ಧಿಯಿಂದ ಸಮತೋಲನ: ಜಿ.ಪಂ. ಸಿಇಒ
ಕನ್ನಡಪ್ರಭ ವಾರ್ತೆ ಮಡಿಕೇರಿಪ್ರಾದೇಶಿಕ ಅಸಮತೋಲನ ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿದರು.ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ, ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ ಅಸಮತೋಲನ ನಿವಾರಣೆ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಬಾಂಬೆ ಪ್ರೆಸಿಡೆನ್ಸಿ, ಹೈದರಾಬಾದ್ ಕರ್ನಾಟಕ, ಕೊಡಗು ಮತ್ತು ಹಳೇ ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿದ ಜಿಲ್ಲೆಗಳು ವಿಭಿನ್ನತೆಯಿಂದ ಕೂಡಿವೆ. ಈ ಪ್ರದೇಶದಲ್ಲೂ ಅಂತರ್ ಜಿಲ್ಲಾ ಅಸಮತೋಲನತೆ ಇವೆ ಎಂದು ನಂಜುಂಡಪ್ಪ ವರದಿ ನೀಡಿದ್ದು, ಸಮಿತಿಯು ಅಂತಹ ಅಸಮತೋಲನೆ ಹಾಗೂ ವಿಶೇಷವಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ನಡುವಿನ ಅಸಮಾನತೆ ನಿವಾರಣೆ ಮಾಡಬೇಕಿದೆ ಎಂದರು.ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ, ತೋಟಗಾರಿಕೆ, ವ್ಯಾಪಾರ ವಾಣಿಜ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಮುನ್ನಡೆಯಬೇಕಿದೆ. ಆ ನಿಟ್ಟಿನಲ್ಲಿ ಅಭಿವೃದ್ಧಿಗೆ ಪೂರಕವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ, ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯತ್ತ ಮುನ್ನಡೆಯಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು. ಜೊತೆಗೆ ಪ್ರತಿಯೊಬ್ಬರಿಗೂ ಉದ್ಯೋಗ ದೊರೆತಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬಹುದು ಎಂದು ಹೇಳಿದರು.
ಆರ್.ಸಿ.ಎಚ್. ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಹಾಡಿಗಳು ಹಾಗೂ ಲೈನ್‌ಮನೆಗಳಲ್ಲಿ ಆರೋಗ್ಯಕ್ಕೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.ರೋಟರಿ ಸಂಸ್ಥೆಯ ನಿರ್ದೇಶಕ ಎಚ್.ಟಿ.ಅನಿಲ್ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಮಿಕರ ಪ್ರಮಾಣದಲ್ಲಿ ಅಸಮತೋಲನ ಕಂಡುಬಂದಿದೆ. ಸ್ಥಳೀಯ ಕಾರ್ಮಿಕರಿಗಿಂತ ಹೆಚ್ಚಾಗಿ ವಲಸೆ ಕಾರ್ಮಿಕರಿದ್ದಾರೆ. ಕಳೆದ 2 ವರ್ಷಗಳಲ್ಲಿ ಕೊಡಗಿಗೆ 1 ಲಕ್ಷಕ್ಕೂ ಅಧಿಕ ಕಾರ್ಮಿಕರು ಹೊರ ರಾಜ್ಯಗಳಿಂದ ಬಂದಿದ್ದಾರೆ. ಈ ಪ್ರಮಾಣ ಮುಂದೊಂದು ದಿನ ಕೊಡಗಿಗೇ ಸಮಸ್ಯೆ ತರುವ ಎಲ್ಲ ಸಾಧ್ಯತೆಗಳಿವೆ. ಸ್ಥಳೀಯ ಕಾರ್ಮಿಕರಿಗೆ ಜಿಲ್ಲೆಯಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕುಶಾಲನಗರ, ಗೋಣಿಕೊಪ್ಪ, ಸೋಮವಾರಪೇಟೆಯಂತಹ ಪ್ರದೇಶಗಳಲ್ಲಿ ಸೂಕ್ತ ಉದ್ಯಮಗಳ ಸ್ಥಾಪನೆ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ, ಕೊಡಗು ಜಿಲ್ಲೆ ಕಾಫಿ ಮತ್ತು ಪ್ರವಾಸೋದ್ಯಮಕ್ಕೆ ಹೆಸರಾಗಿದ್ದು, ಇದರ ಜೊತೆಗೆ ಗಾರ್ಮೆಂಟ್ಸ್ ಸೇರಿದಂತೆ ವಿವಿಧ ಉದ್ಯಮಗಳನ್ನು ತೆರೆಯುವಂತಾಗಬೇಕು ಎಂದು ಹೇಳಿದರು.ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾಹಿತಿ ನೀಡಿ, ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವ ಪ್ರದೇಶ ಕಡಿಮೆಯಾಗಿದೆ. ಆದ್ದರಿಂದ ಭತ್ತ ಬೆಳೆಯುವವರಿಗೆ ಪ್ರೋತ್ಸಾಹಧನ (ಇನ್ಸೆಂಟಿವ್) ನೀಡುವಂತಾಗಬೇಕು ಎಂದು ಕೋರಿದರು.ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ಅಭಿವೃದ್ಧಿ ಸೂಚ್ಯಂಕದಲ್ಲಿ ಸಾಕ್ಷರತೆ ಅತೀ ಮುಖ್ಯವಾಗಿದೆ. ಪ್ರತಿಯೊಬ್ಬರೂ ಅಕ್ಷರ ಕಲಿತಲ್ಲಿ ಅಭಿವೃದ್ಧಿ/ಪ್ರಗತಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತ್ಯೇಕವಾಗಿ ಮುಖ್ಯೋಪಾಧ್ಯಾಯರನ್ನು ನೇಮಿಸುವಂತಾಗಬೇಕು ಎಂದು ಸಲಹೆ ನೀಡಿದರು.ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಅಧಿಕಾರಿ ಎಸ್.ಹೊನ್ನೇಗೌಡ ಮಾತನಾಡಿ, ಆದಿವಾಸಿಗಳು, ಹಾಡಿಯ ಜನರ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಬೇಕು. ವಸತಿ ಶಾಲೆಯ ಶಿಕ್ಷಕರಿಗೆ ವಸತಿ ಗೃಹ ಕಲ್ಪಿಸುವಂತಾಗಬೇಕು ಎಂದು ತಿಳಿಸಿದರು.ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಂಗಳ, ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಮಂಜುನಾಥ್, ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಜಿ.ಪಂ. ಯೋಜನಾ ನಿರ್ದೇಶಕ ಜೀವನ್ ಕುಮಾರ್, ಬಿಸಿಎಂ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ, ವಿಕಲಚೇತನರ ಅಧಿಕಾರಿ ವಿಮಲಾ, ನವೀನ್, ಪವನ್ ಕುಮಾರ್ ಇತರರು ಇದ್ದರು.