ಕಾರವಾರ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆಯು ಉತ್ತಮ ಯೋಜನೆಯಾಗಿದೆ. ಯೋಜನೆಯ ಸೌಲಭ್ಯ ಪಡೆಯಲು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಲು ಜನರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ನಿರ್ದೇಶನ ನೀಡಿದರು.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಲು ಬ್ಯಾಂಕ್‌ಗಳಿಗೆ ಸೂಚಿಸಿದರು.
ನರೇಗಾ ಕಾರ್ಮಿಕರನ್ನು ಈ ಯೋಜನೆಗಳಡಿ ನೋಂದಾಯಿಸಿ ಇದರ ಸೌಲಭ್ಯ ಕಾರ್ಮಿಕರಿಗೂ ದೊರೆಯುವಂತಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಪಂ ಯೋಜನಾ ನಿರ್ದೇಶಕರಿಗೆ ಹೇಳಿದರು.ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಭಾರತಿ ವಸಂತ ಮಾತನಾಡಿ, 2025ರ ಫೆಬ್ರವರಿ ಅಂತ್ಯದ ವರೆಗೆ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ 2,64,543 ಜನರನ್ನು ನೋಂದಣಿ ಮಾಡಲಾಗಿದೆ. ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯಡಿ 6,84,492 ಹಾಗೂ ಅಟಲ್ ಪಿಂಚಣಿ ಯೋಜನೆಯಡಿ 1,02,765 ನೋಂದಣಿ ಮಾಡಲಾಗಿದೆ. ಡಿಸೆಂಬರ್ 2024ರ ಅಂತ್ಯಕ್ಕೆ ಜಿಲ್ಲೆಯಲ್ಲಿ ₹23,406 ಕೋಟಿ ಠೇವಣಿ ಸಂಗ್ರಹಿಸಿ, ₹10,943 ಕೋಟಿ ಸಾಲ ವಿತರಿಸಲಾಗಿದ್ದು, ಸಾಲ ಮತ್ತು ಠೇವಣಿ ಅನುಪಾತ ಶೇ. 46.75ರಷ್ಟಿದೆ. ಕಳೆದ ಬಾರಿಗಿಂತ ಶೇ. 0.42ರಷ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.
ಆರ್‌ಬಿಐ ಪ್ರತಿನಿಧಿ ಶೀಲಪ್ರಿಯಾ ಗೌತಮ್, ಜಿಪಂ ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ನಬಾರ್ಡ್ ಡಿಡಿಎಂ ಸುಶೀಲ್ ನಾಯ್ಕ, ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು ಇದ್ದರು.