ಅಂಗವೈಕಲ್ಯ ಸಾಧನೆಗೆ ಅಡ್ಡಿಯಾಗಬಾರದು: ಗೀತಾಲಕ್ಷ್ಮಿ

KannadaprabhaNewsNetwork |  
Published : Nov 26, 2026, 01:45 AM IST
25ಕೆಎಂಎನ್ ಡಿ30 | Kannada Prabha

ಸಾರಾಂಶ

ಪ್ಯಾರಾಲಿಪಿಕ್ಸ್ ಸೇರಿದಂತೆ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಚೇತನರು ಅದ್ಭುತ ಸಾಧನೆ ಮಾಡುವ ಮೂಲಕ ದೇಶದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಅವರ ಸಾಧನೆಗಳು ಸಮಾಜದ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು.

ಮಂಡ್ಯ:

ಯಾವುದೇ ಅಂಗವೈಕಲ್ಯವು ವ್ಯಕ್ತಿಯ ಸಾಧನೆಗೆ ಹಾಗೂ ಆತನ ಪ್ರತಿಭೆ ಅನಾವರಣಗೊಳಿಸಲು ಅಡ್ಡಿಯಾಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮಿ ಹೇಳಿದರು.

ನಗರದ ಕಲಾ ಮಂದಿರದ ಮುಂಭಾಗದ ಒಳಾಂಗಣ ಆವರಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೊರತರಲು ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಉತ್ತಮ ವೇದಿಕೆ ಎಂದರು.

ಯಾವುದೇ ರೀತಿಯ ಅಂಗವೈಕಲ್ಯವು ವ್ಯಕ್ತಿಯ ಆತ್ಮವಿಶ್ವಾಸ, ಸಾಧನೆ ಹಾಗೂ ಪ್ರತಿಭಾ ಪ್ರದರ್ಶನಕ್ಕೆ ತೊಡಕಾಗಬಾರದು ಎಂಬ ಆಶಯದೊಂದಿಗೆ ವಿಶೇಷ ಚೇತನರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಪ್ಯಾರಾಲಿಪಿಕ್ಸ್ ಸೇರಿದಂತೆ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಚೇತನರು ಅದ್ಭುತ ಸಾಧನೆ ಮಾಡುವ ಮೂಲಕ ದೇಶದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಅವರ ಸಾಧನೆಗಳು ಸಮಾಜದ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಬಹುಮಾನ ಗೆಲ್ಲಲೇಬೇಕೆಂಬ ನಿರೀಕ್ಷೆಗಿಂತ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಮನೋಭಾವ ಮುಖ್ಯವಾಗಿದೆ. ಪ್ರತಿಭೆ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮಾತನಾಡಿ, ದೈಹಿಕ ನ್ಯೂನತೆಗಳು ಜೀವನದಲ್ಲಿ ಕೆಲವೊಮ್ಮೆ ಹಿಂಜರಿಕೆಗೆ ಕಾರಣವಾಗಬಹುದು. ಆದರೆ, ಅವು ಸಾಧನೆಗೆ ಎಂದಿಗೂ ಅಡ್ಡಿಯಾಗಬಾರದು. ಹಲವು ಮಹನೀಯರು ತಮ್ಮ ದೈಹಿಕ ಸವಾಲುಗಳನ್ನು ಮೆಟ್ಟಿ ನಿಂತು ವಿಶ್ವಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅವರ ಜೀವನ ನಮಗೆ ಆತ್ಮವಿಶ್ವಾಸ ಮತ್ತು ದೃಢಸಂಕಲ್ಪದ ಮಹತ್ವ ತಿಳಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ ವೈ.ಸಿ. ಮೈ ಭಾರತ್ ಅಧಿಕಾರಿ ಶೃತಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನ.30 ರಂದು ಹೇಮಗಿರಿ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ
ಪೊಲೀಸರು ದೇಶದ ಒಳಗಿನ ಸೈನಿಕರು, ಸಮಾಜದ ರಕ್ಷಕರು: ಡಾ.ಕುಮಾರ