ಕನ್ನಡಪ್ರಭ ವಾರ್ತೆ ಬೀದರ್
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲೋ ಕುಳಿತು ಮಾಡಿರುವ ಜಾತಿ ಜನಗಣತಿ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಈಗಾಗಲೇ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಂಶಕರಪ್ಪ ಅವರು ಜಾತಿ ಜನಗಣತಿ ವರದಿ ವಿರೋಧಿಸಿದ್ದಾರೆ. ರಾಜ್ಯದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆ ಹೊಂದಿರುವ ಲಿಂಗಾಯತ ಒಳಪಂಗಡಗಳಲ್ಲಿ 94 ಪಂಗಡಗಳನ್ನು ಬಿಟ್ಟು ಕೇವಲ 19 ಪಂಗಡಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಬಹುಸಂಖ್ಯಾತ ಲಿಂಗಾಯತರು ಇರುವ ಕರ್ನಾಟಕದಲ್ಲಿ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಒಪ್ಪಲು ಹೇಗೆ ಸಾಧ್ಯ ಎಂದು ಸ್ವಾಮೀಜಿ ಪ್ರಶ್ನೆ ಮಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಲಿಂಗಾಯತ ಸಮುದಾಯವನ್ನು ಬೇರೆ ಬೇರೆ ಹೆಸರುಗಳಿಂದ ಕರೆಯಲಾಗುತ್ತದೆ. ನಮ್ಮ ಸಮುದಾಯಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಯಾವುದೇ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ನಮ್ಮ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕೊಡಬೇಕು. ಕೇಂದ್ರ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಗಳಿಗೂ ಒಬಿಸಿ 2ಎ ಪಟ್ಟಿಯಲ್ಲಿ ಸೇರಿಸಬೇಕು. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಈ ಎರಡು ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಕೂಡಲಸಂಗಮದಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು ಎಂದು ತಿಳಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯನವರು ಸಹ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅದು 10 ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕಾರಣಕ್ಕೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಾವು ಎಲ್ಲ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಅಲ್ಲಿ ಲಿಂಗಪೂಜೆ ಮಾಡಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಯಿತು.
ನಮ್ಮ ಸಮಾಜದ ನಾಯಕ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿ ಸಮಾಜದ ಎಲ್ಲ ಸ್ವಾಮೀಜಿಗಳ ಸಮ್ಮುಖದಲ್ಲಿ ಸಮಾವೇಶ ಜರುಗಲಿದೆ. ಕಲ್ಯಾಣ ಕರ್ನಾಟಕ ಭಾಗದ ನಮ್ಮ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಸ್ವಾಮೀಜಿ ಕರೆ ಕೊಟ್ಟರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಜಿಲ್ಲಾ ಅಧ್ಯಕ್ಷ ರಾಜಕುಮಾರ ತರಿ, ಗೌರವಾಧ್ಯಕ್ಷ ಶಿವರಾಜ ಕಲ್ಲೂರೆ, ಔರಾದ್ ಯುವ ಘಟಕದ ಅಧ್ಯಕ್ಷ ಅರುಣಕುಮಾರ ಗುದಗೆ, ಬೀದರ್ ತಾಲೂಕಧ್ಯಕ್ಷ ವೀರಪ್ಪ ಅಡ್ಡೆ, ಪ್ರಮುಖರಾದ ರಾಜಕುಮಾರ ಮಡಕಿ, ಸಂದೀಪ ಉದಗಿರೆ, ಸದಾನಂದ ಹಳ್ಳೆ, ಮಲ್ಲಿಕಾರ್ಜುನ್ ಚಿಕಪೆಟೆ ಸೇರಿದಂತೆ ಇತರರಿದ್ದರು.