ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ

KannadaprabhaNewsNetwork | Published : Dec 25, 2024 12:48 AM

ಸಾರಾಂಶ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್‌ ಒದಗಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ, ಕುಶಲಕರ್ಮಿಗಳ ಕೈ ಬಲಪಡಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಹೇಳಿದರು.

ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲಿಸಿದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್‌ ಒದಗಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ, ಕುಶಲಕರ್ಮಿಗಳ ಕೈ ಬಲಪಡಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕುಶಲ ಕರ್ಮಿಗಳನ್ನು ಆರ್ಥಿಕವಾಗಿ ಬಲಪಡಿಸಿ ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ, ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಯೋಜನೆಯ ಫಲವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಬಡಗಿಗಳು, ಶಿಲ್ಪಿಗಳು, ಕಮ್ಮಾರರು, ಮರಗೆಲಸಗಾರರು, ಕುಂಬಾರಿಕೆ, ಮಾಲಾಕಾರರು, ಮೇಸ್ತ್ರಿಗಳು ಸೇರಿದಂತೆ 18 ವೃತ್ತಿಗಳನ್ನೊಳಗೊಂಡ ಕುಶಲಕರ್ಮಿಗಳಿಗೆ ಗುಣಮಟ್ಟದ ತರಬೇತಿ ನೀಡಿ ಆಧುನಿಕತೆಗೆ ಅನುಗುಣವಾಗಿ ತಮ್ಮ ಕೌಶಲ್ಯದಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಲು ತರಬೇತಿ ಸಮಯದಲ್ಲಿ ದಿನಕ್ಕೆ ₹500 ಸ್ಟೇ ಫಂಡ್ ಹಾಗೂ ತರಬೇತಿ ನಂತರದಲ್ಲಿ ಉಚಿತವಾಗಿ ₹15 ಸಾವಿರ ಮೌಲ್ಯದ ಟೂಲ್ ಕಿಟ್‌ ಒದಗಿಸಿ, ಸಾಲದ ಅವಶ್ಯಕತೆ ಇರುವ ಅರ್ಹ ಅಭ್ಯರ್ಥಿಗಳಿಗೆ ಸಾಲ ಮಂಜೂರು ಮಾಡಿ, ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಬಾಕಿ ಇಡದೆ ಶೀಘ್ರವಾಗಿ ಪ್ರತಿಯೊಬ್ಬರಿಗೂ ಸಾಲ ಮಂಜೂರು ಮಾಡಲು ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪ್ರಾರಂಭಿಸಿ, ಗುಣಮಟ್ಟದ ತರಬೇತಿ ನೀಡಬೇಕು ಎಂದ ಅವರು, ಯೋಜನೆಯ ಫಲವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಖಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ಪಿಎಂ ವಿಶ್ವಕರ್ಮ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಕುಶಲಕರ್ಮಿಗಳನ್ನು ಬಲಪಡಿಸುವುದು ಹಾಗೂ ಅವರ ಕೌಶಲ್ಯವನ್ನು ಹೆಚ್ಚಿಸುವ ಸಲುವಾಗಿ ಸೂಕ್ತ ತರಬೇತಿ ನೀಡುವುದರೊಂದಿಗೆ ಶೇ.5 ರಷ್ಟು ಬಡ್ಡಿ ದರದಲ್ಲಿ ಬ್ಯಾಂಕುಗಳ ಮೂಲಕ ಸಾಲ ನೀಡಲಾಗುತ್ತದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 46990 ಅರ್ಜಿಗಳು ಸ್ವೀಕೃತವಾಗಿದ್ದು, 2422 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 9 ತರಬೇತಿ ಕೇಂದ್ರಗಳಿದ್ದು, 5 ತರಬೇತಿ ಕೇಂದ್ರಗಳು ಕಾರ್ಯರೂಪದಲ್ಲಿವೆ. ಶೀಘ್ರವಾಗಿ ಎಲ್ಲಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸಾಲಕ್ಕಾಗಿ 2422 ಅರ್ಜಿಗಳು ಬಂದಿದ್ದು, 990 ಅಭ್ಯರ್ಥಿಗಳಿಗೆ ಸಾಲ ಮಂಜೂರಾಗಿದೆ. ಇತರೆ ತಾಂತ್ರಿಕ ದೋಷಗಳಿಂದ ಬಾಕಿಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಸಾಲ ಮಂಜೂರಾಗುವಂತೆ ಕ್ರಮ ವಹಿಸಲಾಗುವುದು ಎಂದರು.ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಚಂದ್ರಶೇಖರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್, ವಿಶ್ವ ಕರ್ಮ ಯೋಜನೆ ಸಲಹಾ ಸಮಿತಿ ಸದಸ್ಯರು, ವಿವಿಧ ಬ್ಯಾಂಕ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Share this article