ಸರ್ಕಾರದ ಅನುದಾನ ಸಂಪೂರ್ಣ ಬಳಕೆಯಾಗಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

KannadaprabhaNewsNetwork |  
Published : Oct 14, 2025, 01:00 AM IST
13ಕೆಎಂಎನ್ ಡಿ15 | Kannada Prabha

ಸಾರಾಂಶ

ಈಗಾಗಲೇ ನಡೆಯುತ್ತಿರುವ ಕಾಮಗಾರಿ ಅಂತಿಮಗೊಳಿಸಬೇಕು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಇಲಾಖೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯ್ತಿ ಆಡಳಿತಾಧಿಕಾರಿ ಶ್ರೀನಿವಾಸ್ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರ ಕಲ್ಯಾಣಕ್ಕಾಗಿ ಸರ್ಕಾರ ಇಲಾಖೆವಾರು ವಿವಿಧ ಯೋಜನೆಯಡಿ ನೀಡುವ ಅನುದಾನವನ್ನು ತಾಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣವಾಗಿ ವೆಚ್ಚಮಾಡಬೇಕು ಎಂದರು.

ಈಗಾಗಲೇ ನಡೆಯುತ್ತಿರುವ ಕಾಮಗಾರಿ ಅಂತಿಮಗೊಳಿಸಬೇಕು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚು ಮಾಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿ ರೂಪಿಸಬೇಕು. ಮಕ್ಕಳ ಸಂಖ್ಯೆ ಹೆಚ್ಚು ಮಾಡುವ ಶಿಕ್ಷಕಿಯನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಗೌರವಿಸುವಂತಾಗಬೇಕೆಂದರು.

ರೈತರು ಕೃಷಿಯ ಜೊತೆಗೆ ಹೈನುಗಾರಿಕೆ, ತೋಟಗಾರಿಕೆ, ರೇಷ್ಮೆ ಬೆಳೆ ಬೆಳೆಯುವಂತೆ ಅಧಿಕಾರಿಗಳು ತಿಳಿವಳಿಕೆ ನೀಡಬೇಕು. ಸರ್ಕಾರದ ಸೌಲಭ್ಯ ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ರೈತರು ವಾಣಿಜ್ಯ ಬೆಳೆ ಬೆಳೆಯುವ ಮೂಲಕ ಅರ್ಥಿಕತೆಯಲ್ಲಿ ಸದೃಢರಾಗುವಂತೆ ಶ್ರಮಿಸಬೇಕು ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಗುಣ ಮಟ್ಟದ ಶಿಕ್ಷಣ ನೀಡಲು ಸರ್ಕಾರ ಸಿದ್ಧಪಡಿಸಿರುವ ಯೋಜನೆ ಸಂಪೂರ್ಣ ಅನುಷ್ಠಾನಗೊಳ್ಳುವಂತೆ ಶಿಕ್ಷಕರಿಗೆ ಸೂಚಿಸಬೇಕು. ಶುದ್ಧ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಮಕ್ಕಳ ಸಂಖ್ಯೆ ಹೆಚ್ಚಾಗಿಸಲು ಶಿಕ್ಷಕರು ಶ್ರಮಿಸಬೇಕು ಎಂದು ಬಿಇಒ ಉಮಾ ಅವರಿಗೆ ತಿಳಿಸಿದರು.

ಡೆಂಘೀ, ಚಿಕನ್‌ಗುನ್ಯಾ ರೋಗ ಸೇರಿದಂತೆ ಸಾಂಕ್ರಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೌಲಭ್ಯ ದೊರೆಯಬೇಕೆಂದರು.

ತಾಪಂ ಇಒ ಶ್ರೀನಿವಾಸ್ ಮಾತನಾಡಿ, ತಾಲೂಕಿನ 25 ರಿಂದ 45 ವರ್ಷದ ಸುಮಾರು 6 ಸಾವಿರ ಮಹಿಳೆಯರಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದೊಂದಿಗೆ ಸಿ.ಆರ್‌ಎಸ್ ಅನುದಾನದಲ್ಲಿ ಮುಟ್ಟಿನ ಕಪ್ ವಿತರಣೆ ಮಾಡಲಾಗುವುದು. ಅ.15 ಮತ್ತು 16 ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ 2 ಸಾವಿರ ಮಹಿಳೆಯರಿಗೆ ಮುಟ್ಟಿನ ಕಪ್‌ಗಳ ವಿತರಿಸಲು ತರಬೇತಿ ಆಯೋಜನೆ ಮಾಡಲಾಗಿದೆ ಎಂದರು.

ಕೆಲವು ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮನೆಯಲ್ಲಿ ಸ್ವಚ್ಛತೆ ಕಡಿಮೆ ಎನ್ನುವ ದೂರು ಕೇಳಿ ಬರುತ್ತಿವೆ. ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಸಭೆಗೆ ಗಿಡಗಳನ್ನು ನೆಟ್ಟಿರುವ ಫೋಟೋ ವಿಡಿಯೋ ಸಮೇತ ಹಾಜರಾಗಬೇಕೆಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಯೋಜನಾಧಿಕಾರಿ ದೀಪು ಇದ್ದರು.

PREV

Recommended Stories

ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ : ಸಿದ್ದರಾಮಯ್ಯ