ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಶಿವರಾಜ್ ತಂಗಡಗಿ

KannadaprabhaNewsNetwork |  
Published : Nov 08, 2026, 02:30 AM IST
ಪೋಟೊ7ಕೆಎಸಟಿ1ಎಕುಷ್ಟಗಿಯಲ್ಲಿ ತಾಲೂಕಾಡಳಿತ ವತಿಯಿಂದ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿದರು. | Kannada Prabha

ಸಾರಾಂಶ

ಕುಷ್ಟಗಿ ಪಟ್ಟಣದ ಪಿಸಿಎಚ್‌ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ ವತಿಯಿಂದ ಪ್ರಜಾಸೇವೆ ಆಂದೋಲನ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು.

ಕುಷ್ಟಗಿ: ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದನ್ನು ಬಿಟ್ಟು ಅವರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಇನ್ನು ಮುಂದೆ ನಡೆಯುವುದಿಲ್ಲ. ಜನರಿಂದ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು.

ಪಟ್ಟಣದ ಪಿಸಿಎಚ್‌ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ ವತಿಯಿಂದ ನಡೆದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅರ್ಹ ಅಹವಾಲುಗಳನ್ನು ಕಾಲಮಿತಿಯೊಳಗೆ ಕಡ್ಡಾಯವಾಗಿ ವಿಲೇವಾರಿ ಮಾಡಬೇಕು ಎಂದರು.

ಸರ್ಕಾರವೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಆದರೆ, ಸಭೆಗಳಲ್ಲಿ ಅರ್ಜಿ ಸ್ವೀಕರಿಸಿ ಕಡತಗಳಿಗೆ ಸೀಮಿತಗೊಳಿಸಿದರೆ ಆಂದೋಲನದ ಉದ್ದೇಶವೇ ವಿಫಲವಾಗುತ್ತದೆ. ಸಾರ್ವಜನಿಕರು ಸಲ್ಲಿಸಿದ ಪ್ರತಿಯೊಂದು ಅರ್ಜಿಗೂ ಅಧಿಕಾರಿಗಳು ಹೊಣೆಗಾರಿಕೆಯಿಂದ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರ ಕೆಲಸಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ ಅವರು, ವಿಶೇಷವಾಗಿ ಮಾಸಾಶನ ಪಡೆಯುವ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಲ್ಲಿ ವಿಳಂಬ ಮಾಡಬಾರದು ಎಂದರು.

ರೈತರಿಗೆ ಪರಿಹಾರ ಮೊತ್ತ ಹೆಚ್ಚಳ: ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ನೀಡುವ ಪರಿಹಾರ ಮೊತ್ತವನ್ನು ₹2,500 ಬದಲಿಗೆ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರ ₹20 ಸಾವಿರ ಕೋಟಿ ಒದಗಿಸಿದೆ. ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ಪರಿಹಾರ ದೊರೆಯುವಂತೆ ಬಿಜೆಪಿ ನಾಯಕರು ಪ್ರಧಾನ ಮಂತ್ರಿಗೆ ಶಿಫಾರಸು ಮಾಡಲಿ ಎಂದು ಹೇಳಿದರು.

ಕುಷ್ಟಗಿಗೆ ₹92 ಕೋಟಿ ಅನುದಾನ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹5 ಸಾವಿರ ಕೋಟಿ ಅನುದಾನ ಒದಗಿಸಲಾಗಿದ್ದು, ಕುಷ್ಟಗಿ ತಾಲೂಕಿಗೆ ₹92 ಕೋಟಿ ಅನುದಾನ ಬಂದಿದೆ. ಶಾಲೆಗಳ ಅಭಿವೃದ್ಧಿಗಾಗಿ ಶೇ. 25ರಷ್ಟು ಅನುದಾನ ಮೀಸಲಿಡಲಾಗಿದೆ. 76 ಸಾವಿರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದರು.

ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಹಳೆಯ ಅರ್ಜಿಗಳೇ ವಿಲೇವಾರಿಯಾಗದಿದ್ದರೆ ಮತ್ತೊಂದು ಸಭೆ ನಡೆಸುವುದರಿಂದ ಏನು ಪ್ರಯೋಜನ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ತಾಲೂಕಿನ ರೈತರು ಹೊಲಗಳಿಗೆ ತೆರಳಲು ರಸ್ತೆ ಇಲ್ಲದೆ ಪರದಾಡುತ್ತಿದ್ದಾರೆ. ಕೆಲವು ಕಡೆ ಬಿತ್ತನೆ ಕಾರ್ಯವೂ ನಡೆದಿಲ್ಲ. ಇಂತಹ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ಜನರು ಯಾರ ಬಳಿ ಹೋಗಬೇಕು? ಸರ್ಕಾರ ಮತ್ತು ಸಚಿವರಿಗೆ ಕೆಟ್ಟ ಹೆಸರು ಬರದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.

ಪ್ರಾಸ್ತಾವಿಕವಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಮಾತನಾಡಿ, ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಈಗಾಗಲೇ ಶೇ. 70ರಷ್ಟು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗಿದೆ ಎಂದರು. ಸ್ಥಗಿತಗೊಂಡಿರುವ ಮಾಸಾಶನ ಪಡೆಯುವ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಮರುದಾಖಲಾತಿ ಮಾಡಿಸಿಕೊಳ್ಳಬೇಕು. ಪಿಂಚಣಿಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 1.30 ಲಕ್ಷ ರೂ.ಗೆ ಏರಿಸಲಾಗಿದೆ ಎಂದು ಹೇಳಿದರು.

ಮಾಹಿತಿ ಮಳಿಗೆಗಳು: ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಮಾಹಿತಿ ನೀಡಲಾಯಿತು. ಈ ಮಾಹಿತಿ ಮಳಿಗೆಗಳನ್ನು ಸಚಿವ ಶಿವರಾಜ ತಂಗಡಗಿ, ಶಾಸಕ ದೊಡ್ಡನಗೌಡ ಪಾಟೀಲ್‌, ದಿಶಾ ಸಮಿತಿಯ ಸದಸ್ಯ ದೊಡ್ಡಬಸವನಗೌಡ ಬಯ್ಯಾಪುರ ಉದ್ಘಾಟಿಸಿದರು.

ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಸಾಹಿಲ್ ಬಾಗ್ಲಾ, ಆರ್‌ಎಫ್‌ಒ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ತಹಸೀಲ್ದಾರ್ ಅಶೋಕ್ ಶಿಗ್ಗಾಂವಿ, ತಾಪಂ ಇಒ ಅಮರೇಶ್ , ಸಿಪಿಐ ವಿಶ್ವನಾಥ ಹಿರೇಗೌಡರ್ ಉಪಸ್ಥಿತರಿದ್ದರು.

150ಕ್ಕೂ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕುಷ್ಟಗಿ ತಾಲೂಕು ವ್ಯಾಪ್ತಿಯ ಗ್ರಾಮ ಒನ್‌ ಹಾಗೂ ಕರ್ನಾಟಕ ಒನ್‌ ಸಿಬ್ಬಂದಿ ಅರ್ಜಿ ಸಲ್ಲಿಸುವ ಕೆಲಸ ಮಾಡಿದರು. ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ