ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸರಸ್ವತಿ ಪೂಜೆ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ವಿದ್ಯಾರ್ಥಿಗಳ ಮನಸ್ಸನ್ನು ಚಂಚಲಗೊಳಿಸಿ ಗುರಿ ಸಾಧನೆಯಲ್ಲಿ ಅಡೆತಡೆಯಾಗುತ್ತದೆ ಎಂದು ಎಚ್ಚರಿಸಿದರು. ಶಿಕ್ಷಣವು ಜ್ಞಾನಾರ್ಜನೆಯನ್ನು ಹೆಚ್ಚಿಸುವುದರ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಹವ್ಯಾಸಗಳು ಅವರ ಭವಿಷ್ಯದ ಬದುಕನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರೀತ್ಯಗಳು ಇಂದಿನ ಮಾನವ ಸಮಾಜದ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿವೆ ಎಂದು ಹೇಳಿದರು. ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರಕೃತಿಗೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಬಿ. ಶಶಿಧರ್, ಎಲ್‌ಎಸಿ ತರಳಬಾಳು ಶಾಲೆಯ ಅಧ್ಯಕ್ಷ ಮಹಾಲಿಂಗಸ್ವಾಮಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಟಿ. ಆನಂದ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಅಶೋಕ್ ಟಿ.ಸಿ. ಪ್ರಾಸ್ತಾವಿಕ ಭಾಷಣ ಮಾಡಿದರು. ತಾಲೂಕು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ರಮೇಶ್ ಹಾಗೂ ಕವಯಿತ್ರಿ ಹರ್ಷಿಯಾ ಬಾನು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಸೆಳೆಯುವಂತಿದ್ದು, ಸಮಾರಂಭ ಉತ್ಸಾಹಭರಿತವಾಗಿ ಸಮಾಪ್ತಿಯಾಯಿತು.