ಜಿಲ್ಲೆಗೆ ನೀಡಿದ ಅನುದಾನ ಮಾಹಿತಿ ಬಹಿರಂಗಪಡಿಸಲಿ: ಪದ್ಮರಾಜ್ ಸವಾಲು

KannadaprabhaNewsNetwork | Published : Apr 2, 2024 1:01 AM

ಸಾರಾಂಶ

ಪುತ್ತೂರು ದರ್ಬೆಯಲ್ಲಿ ಸೋಮವಾರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಕಳೆದ ಅವಧಿಯ ಸಂಸದರು ತಾವು ಜಿಲ್ಲೆಗೆ ನೀಡಿದ ಕೋಟಿಗಳ ಅನುದಾನದ ಮಾಹಿತಿ ಬಹಿರಂಗ ಪಡಿಸುವಂತೆ ಸವಾಲು ಹಾಕಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ದ.ಕ. ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕೆಲಸ ಕಾರ್ಯಗಳೆಲ್ಲಾ ಕಾಂಗ್ರೆಸ್ ಸಂಸದರ ಅವಧಿಯಲ್ಲಿ ನಡೆದಿರುವುದಾಗಿದೆ. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ತಾನು ಜಿಲ್ಲೆಯ ಅಭಿವೃದ್ಧಿಗಾಗಿ ಕೋಟ್ಯಾಂತರ ಅನುದಾನ ಒದಗಿಸುವುದಾಗಿ ಹೇಳುತ್ತಿದ್ದಾರೆ. ಅವರು ನೀಡಿರುವ ಕೋಟಿಗಳ ಬಗ್ಗೆ ಜನತೆಯ ಮುಂದೆ ಬಹಿರಂಗಪಡಿಸಲಿ ಎಂದು ದ.ಕ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಸವಾಲು ಹಾಕಿದ್ದಾರೆ.

ನಗರದ ದರ್ಬೆಯಲ್ಲಿ ಸೋಮವಾರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ೪೦ ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಲೋಕಸಭಾ ಸದಸ್ಯರಿದ್ದರು. ಬಳಿಕದ ೩೩ ವರ್ಷಗಳಿಂದ ಬಿಜೆಪಿ ಪಕ್ಷದ ಸಂಸದರಿದ್ದಾರೆ. ಇಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ ಅಭಿವೃದ್ಧಿ ಕೆಲಸ ಕಾರ್ಯಗಳಾಗಿದೆ. ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೇವಲ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ನಡೆಸಿದೆ. ನಮ್ಮ ಜಿಲ್ಲೆಯು ಸಾಮರಸ್ಯದ ವೈಭವದ ಜಿಲ್ಲೆಯಾಗಿದೆ ಎಂದರು.

ಚುನಾವಣಾ ಕಚೇರಿ ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯ 16 ಬ್ಲಾಕ್‌ಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಎನ್‌ಡಿಎ ಸರ್ಕಾರ ಕಳೆದ ೧೦ ವರ್ಷಗಳಲ್ಲಿ ಯಾವುದೇ ಸಾಧನೆಗಳನ್ನು ಮಾಡದೆ ಕೇವಲ ಭಾವನಾತ್ಮಕವಾಗಿ ಬಳಸಿಕೊಂಡು ಅಧಿಕಾರ ನಡೆಸಿದೆ. ಈ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ ಸರ್ಕಾರವಾಗಿದೆ ಎಂದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ವಿವಿಧ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ, ಕೆಪಿಸಿಸಿ ಸದಸ್ಯ ಎಂ.ಎಸ್. ಮಹಮ್ಮದ್, ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಆಲಿ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೊಜ, ಮುಖಂಡರಾದ ಉಮಾನಾಥ ಶೆಟ್ಟಿ ಪೆರ್ನೆ, ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

Share this article