ಅನುದಾನಿತ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ

KannadaprabhaNewsNetwork | Published : Nov 27, 2023 1:15 AM

ಸಾರಾಂಶ

ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಹೇಳಿದರು.

ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟನೆ

ಗದಗ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಭಾನುವಾರ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಿದೆ. ಕೊನೆಪಕ್ಷ 2020ರ ವರೆಗೆ ನಿವೃತ್ತಿ ಆದ ಹುದ್ದೆ ಭರ್ತಿ ಮಾಡುವ ಚಿಂತನೆ ಇದೆ ಎಂದರು.

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2023 ರ ವರೆಗೆ ನಿವೃತ್ತಿಯಾದ 8 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಮಾಡಬೇಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಆದರೆ 2020 ರವರೆಗೆ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಅನುಮತಿ ಸಿಗುವ ವಿಶ್ವಾಸವಿದೆ ಎಂದು ಭರವಸೆ ನೀಡಿದರು. ಕಾನೂನು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಕೊರತೆ ಆದರೆ ಉತ್ತರ ಕರ್ನಾಟಕ ಶೈಕ್ಷಣಿಕ ವ್ಯವಸ್ಥೆ ಕುಸಿಯುತ್ತಿದೆ. ಅನುದಾನ ಕೊರತೆ ಆಗುವಂತಹ ಯಾವುದೇ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳಬಾರದು. ಆರ್ಥಿಕ ಕಷ್ಟಗಳನ್ನು ನೀಗಿಸಿ, ಸವಾಲು ಎದುರಿಸಿ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಪ್ರಸ್ತುತವಾಗಿ ಶಿಕ್ಷಕರ ನೇಮಕಾತಿ ಗೊಂದಲ, ಪಿಂಚಣಿ ವಿಷಯ, ಅನುದಾನ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಶಿಕ್ಷಣ ಇಲಾಖೆ ಎದುರಿಸುತ್ತಿದೆ. ಕ್ಲಿಷ್ಟ ಸಮಸ್ಯೆಗಳನ್ನು ಸರಳವಾಗಿ ಶಿಕ್ಷಣ ಸಚಿವರು ನಿಭಾಯಿಸಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಶಿಕ್ಷಕರು ಮತ್ತು ಶೈಕ್ಷಣಿಕ ಕ್ಷೇತ್ರದ ಸವಾಲುಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿ ಸಚಿವರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ವಿಪ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ, ನಗರಸಭೆಯ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಡಿಡಿಪಿಯು ಕೃಷ್ಣಪ್ಪ ಇ. ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಉಪನ್ಯಾಸಕರು ಸಿಬ್ಬಂದಿಗಳು ಹಾಜರಿದ್ದರು.ಮುಂಬರುವ ಆರ್ಥಿಕ ವರ್ಷದಲ್ಲಿ 500 ರಿಂದ 600 ಶಾಲೆಗಳಲ್ಲಿ ಪಬ್ಲಿಕ್ ಶಾಲಾ ವ್ಯವಸ್ಥೆ ಜಾರಿ ಆಗಲಿದೆ. ಇದಕ್ಕಾಗಿ ರು. 2800 ಕೋಟಿ ಅನುದಾನ ಒದಗಿಸುವ ಗುರಿ ಹೊಂದಲಾಗಿದೆ. ಕೈಗಾರಿಕೆ, ಇತರೆ ಸಂಸ್ಥೆಗಳ ಸಿಎಸ್‌ಆರ್ (ಸಾಮಾಜಿಕ ಅಭಿವೃದ್ಧಿ) ಅನುದಾನವನ್ನು ಸಂಪೂರ್ಣ ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಥಳೀಯ ಸಂಸ್ಕೃತಿ, ಸಂಪ್ರದಾಯ ಉತ್ತೇಜಿಸುವ ಪಠ್ಯಗಳನ್ನು ಕಲಿಸಲಾಗುವುದು. ರಾಜ್ಯದ 60 ಲಕ್ಷ ಮಕ್ಕಳ ಆರೋಗ್ಯ ದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ರಾಗಿ ಮಿಶ್ರಿತ ಹಾಲನ್ನು ಶಾಲೆಗಳಲ್ಲಿ ವಿತರಿಸುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.

Share this article