ಹುಬ್ಬಳ್ಳಿ:
ಇಲ್ಲಿನ ಕೆಎಂಸಿಆರ್‌ಐಗೆ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಪರಿಹಾರ ನೀಡಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದರು.
ಮೊದಲು ಗಾಯಾಳುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಗುಣಪಡಿಸುವುದು ನಮ್ಮ ಮುಂದಿರುವ ಸವಾಲು. ನಂತರ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ಬಗ್ಗೆ ಆಂತರಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಗಾಯಾಳುಗಳ ಕುಟುಂಬಸ್ಥರೊಂದಿಗೆ ಮಾತನಾಡಿದ ಸಚಿವರು, ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ. ಚಿಂತಿಸಬೇಡಿ ಎಂದು ಧೈರ್ಯ ತುಂಬಿದರು.
ಉತ್ತರ ಕರ್ನಾಟಕದ 7 ಜಿಲ್ಲೆಗಳ ಅತ್ಯಂತ ಕಠಿಣ ಪ್ರಕರಣಗಳು ಕೆಎಂಸಿಆರ್‌ಐಗೆ ಬರುತ್ತವೆ. ಉತ್ತಮ ಚಿಕಿತ್ಸೆ ನೀಡುವಲ್ಲಿ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ಸಂಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳು ಸಹ ಆಗಿವೆ. ಆದರೆ, ಕೆಲವು ಸಣ್ಣ ಪುಟ್ಟ ಲೋಪಗಳು ನಡೆದಿರುವ ಕುರಿತು ಗಮನಕ್ಕೆ ಬಂದಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಆದ್ಯತೆ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.