ಕೃಷ್ಣೆ ಭೂ ಪರಿಹಾರ ಬಗ್ಗೆ 16ಕ್ಕೆ ಮತ್ತೆ ಚರ್ಚೆ

KannadaprabhaNewsNetwork |  
Published : Sep 12, 2025, 12:06 AM IST

ಸಾರಾಂಶ

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕಾಗಿ ಅವಶ್ಯವಿರುವ ಜಮೀನು ಸ್ವಾಧೀನ, ಪರಿಹಾರ ನಿಗದಿ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಚರ್ಚೆ ಅಪೂರ್ಣವಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕಾಗಿ ಅವಶ್ಯವಿರುವ ಜಮೀನು ಸ್ವಾಧೀನ, ಪರಿಹಾರ ನಿಗದಿ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಚರ್ಚೆ ಅಪೂರ್ಣವಾಗಿದೆ.

ಈ ಹಿನ್ನೆಲೆಯಲ್ಲಿ ಸೆ.16 ರಂದು ವಿಶೇಷ ಸಚಿವ ಸಂಪುಟ ನಡೆಸಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಹಾಗೂ ಪರಿಹಾರ ನಿಗದಿ ಬಗ್ಗೆ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಜತೆಗೆ ಭೂಸ್ವಾಧೀನ ಸಂಬಂಧ ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತವಾದ ಹಾಗೂ ಸಕಾರಾತ್ಮಕ ಚರ್ಚೆ ನಡೆದಿದೆ. ಈ ಬಗ್ಗೆ ಮತ್ತಷ್ಟು ಚರ್ಚೆ ಅಗತ್ಯವಿರುವ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದರು.

ಪರಿಹಾರ ನಿಗದಿಯದ್ದೇ ಸಮಸ್ಯೆ:

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524.256 ಮೀಟರ್‌ ಎತ್ತರಿಸಲು ಚರ್ಚಿಸಲಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಕ್ಕೆ ಆರಂಭದಲ್ಲಿ 51,148 ಕೋಟಿ ರು. ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ 17,627 ಕೋಟಿ ರು. ಎಂದು ಅಂದಾಜಿಸಲಾಗಿತ್ತು. ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸಹ ಸೇರಿದೆ. ಇದುವರೆಗೆ 29,566 ಎಕರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದ್ದು, 59,354 ಎಕ್ರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ.

ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಹಾಗೂ ನ್ಯಾಯಾಲಯ ಸೂಚಿಸಿರುವ ಪರಿಹಾರ ನೀಡಿದರೆ ಭೂಸ್ವಾಧೀನ ವೆಚ್ಚ 2 ಲಕ್ಷ ಕೋಟಿ ರು. ದಾಟಲಿದೆ. ಹೀಗಾಗಿ ಯಾವ ರೀತಿಯಲ್ಲಿ ಪರಿಹಾರ ನಿಗದಿ ಮಾಡಬೇಕು. ನಿಗದಿ ಮಾಡಿರುವ ಪರಿಹಾರವನ್ನು ಯಾವ ರೂಪದಲ್ಲಿ ನೀಡಬೇಕು ಎಂಬ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಆದರೆ ಈ ವಿಷಯದ ಬಗ್ಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸೆ.16ಕ್ಕೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ