ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಣೆ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗಾವಹಿಸಬೇಕು. ಜೊತೆಗೆ ಜನ-ಜಾನುವಾರುಗಳ ಪ್ರಾಣಹಾನಿಗೆ ಸಂಬಂಧಿಸಿದಂತೆ ತ್ವರಿತ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಫುಲ್ ಬನ್ಸಾಲ್ ಸೂಚಿಸಿದರು.ಜಿಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದ ಇಲಾಖೆಗಳು ಜಂಟಿ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದರು.
ಜಿಪಂ ಅಡಿಯಲ್ಲಿ ಬರುವ ವಿವಿಧ ವಸತಿ ಯೋಜನೆಗಳಡಿ ನಿಗದಿಪಡಿಸಿದ ಗುರಿ ಸಾಧಿಸಬೇಕು. ಈಗಾಗಲೇ ಬಾಕಿ ಇರುವ ಮನೆಗಳ ನಿರ್ಮಾಣ ಕಾರ್ಯ ತ್ವರಿತವಾಗಿ ಪ್ರಾರಂಭಿಸಬೇಕು. ಪ್ರತಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ಪ್ರತಿ ಗ್ರಾಮಪಂಚಾಯತಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಲಜೀವನ ಮಿಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಾಗಲೇ ನಿಗದಿಪಡಿಸಿದ ಗುರಿಗಳನ್ನು ಪೂರ್ಣಗೊಳಿಸುವದರ ಜೊತೆಗೆ ಸಮರ್ಪಕ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.ಪ್ರಸಕ್ತ ಸಾಲಿನ ಚಳಿಗಾಲ ಅಧಿವೇಶನ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಉತ್ಸವದ ಮಾಹಿತಿ ಪಡೆದ ಅವರು, ಈ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಭೆ ನಿರ್ವಹಿಸಿದರು.
ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೋನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ನಗರಾಭಿವೃದ್ದಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ರಾಜೀವ ಕೂಲೇರ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಗ್ರಾಮಸಭೆ ಆಯೋಜಿಸಬೇಕು. ಗ್ರಾಮಸಭೆಗಳ ಬೇಡಿಕೆ ಅನುಸಾರ ತಯಾರಿಸಲಾದ ಕ್ರಿಯಾಯೋಜನೆಗಳ ಅನುಸಾರ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅನುದಾನ ವ್ಯರ್ಥವಾಗದಂತೆ ನಿಗಾವಹಿಸಬೇಕು.
- ವಿಫುಲ್ ಬನ್ಸಾಲ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ