ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗಿದ್ದ ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು. ಜೊತೆಗೆ, ಮನೆ ಹಂಚಿಕೆ ಪತ್ರ-ಹಕ್ಕುಪತ್ರ ಕೂಡ ವಿತರಿಸಿದರು. ಕಾರ್ಯಕ್ರಮದಲ್ಲಿ 5 ಜಿಲ್ಲೆಗಳ 20,360 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಇದೇ ವೇಳೆ, ರಾಜ್ಯಾದ್ಯಂತ ಒಟ್ಟು 42,345 ಮನೆಗಳನ್ನು ವರ್ಚವಲ್ ಮೂಲಕ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರದಲ್ಲಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ದೇಶದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯುತ್ತಿದೆ ಎಂದು ಪ್ರತಿಪಾದಿಸಿದರು.10 ಜಿಲ್ಲೆಗಳಿಂದ ಸುಮಾರು ಲಕ್ಷಕ್ಕೂ ಅಧಿಕ ಮಂದಿ ಸಮಾವೇಶಕ್ಕೆ ಆಗಮಿಸಿದ್ದು, ಮನೆಗಳ ಹಸ್ತಾಂತರ ಕಾರ್ಯಕ್ರಮ ಕೇವಲ ಕಲ್ಯಾಣ ಯೋಜನೆಯಷ್ಟೇ ಅಲ್ಲದೆ, ರಾಜ್ಯ ರಾಜಕೀಯದಲ್ಲಿ ಮಹತ್ವದ ಅಧ್ಯಾಯಕ್ಕೂ ಸಾಕ್ಷಿಯಾಯ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಮಾವೇಶದಲ್ಲಿ ಪಾಲ್ಗೊಂಡ ನಾಯಕರು, ಗ್ಯಾರಂಟಿ ಯೋಜನೆಗಳ ಜಾರಿಯನ್ನು ಸಮರ್ಥಿಸಿಕೊಂಡು, ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುತ್ತಾ, ಅನುದಾನದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿದರು.
ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ವಿವಿಧ ಕಲಾತಂಡಗಳು, ಕುಂಭಹೊತ್ತ ಮಹಿಳೆಯರು ಸ್ವಾಗತಿಸಿದರು.ನಮಗೆ ಗೌರ್ನರ್ ಮೂಲಕ ಕೇಂದ್ರದಿಂದ ಕಾಟ; ಖರ್ಗೆ:
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಸರ್ಕಾರ ಇರುವ ರಾಜ್ಯ ಸರ್ಕಾರಗಳ ರಾಜ್ಯಪಾಲರನ್ನು ಕೈಗೊಂಬೆಯಂತೆ ಬಳಸಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಹೇಳಿದ ಭಾಷಣ ಮಾಡದಂತೆ ಪ್ರಧಾನಿ ಕಚೇರಿ, ಗೃಹ ಕಚೇರಿಯಿಂದಲೇ ರಾಜ್ಯಪಾಲರಿಗೆ ಆದೇಶ ಬರುತ್ತಿದೆ. ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಕಾರ್ಯ ನಡೆಯುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಗಳ ಒಳ್ಳೆಯ ಕಾರ್ಯಗಳಿಗೆ ಹಾಗೂ ಮಸೂದೆಗಳಿಗೆ ಹಿನ್ನಡೆಯಾಗುತ್ತಿದೆ. ಇದು ಬರೀ ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು ಹಾಗೂ ಕೇರಳದಲ್ಲೂ ಆಗಿದೆ. ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಕಾರ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.ಬಡ ಜನರಿಗೆ, ಕೂಲಿ ಕಾರ್ಮಿಕರಿಗೆ ಇದ್ದಲ್ಲಿಯೇ ಉದ್ಯೋಗದ ಅವಕಾಶ ಕಲ್ಪಿಸುತ್ತಿದ್ದ ಮನರೇಗಾ ಯೋಜನೆ ರದ್ದು ಮಾಡಿ ವಿಬಿ ಜಿ ರಾಮ್ ಜಿ ತರುತ್ತಿರುವ ವಿರುದ್ಧ ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕರಾಳ ರೈತ ವಿರೋಧಿ ಕರಾಳ ಕೃಷಿ ಕಾನೂನಿನ ವಿರುದ್ಧ ನಡೆಸಿದ ಮಾದರಿಯಲ್ಲೇ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಎಲ್ಲರೂ ಅದಕ್ಕೆ ಬೆಂಬಲ ನೀಡಬೇಕು ಎಂದು ಖರ್ಗೆ ಹೇಳಿದರು.