ವಸತಿ ಶಾಲೆ ಮಕ್ಕಳಿಗೆ ಆಯುಷ್ ಕಿಟ್ ವಿತರಣೆ

KannadaprabhaNewsNetwork |  
Published : Oct 04, 2024, 01:05 AM IST
ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹರಿದ್ರಾಕಾಂಡ ಗ್ರಾನ್ಯೂಲ್ಸ್, ದೇಹ ಪುಷ್ಠಿಗೆ ಪೂರಕವಾದ ಚ್ಯವನ ಪ್ರಾಶ ಹಾಗೂ ನೆನಪಿನ ಶಕ್ತಿ ಹೆಚ್ಚಿಸುವ ಕೂಷ್ಮಾಂಡಾವಲೇಹ್ಯ ಒಳಗೊಂಡಿರುವ ವಿದ್ಯಾರ್ಥಿ ಚೇತನ ಆಯುಷ್ ಕಿಟ್  ಅನ್ನು ವಸತಿ ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿತರಿಸಿದರು. | Kannada Prabha

ಸಾರಾಂಶ

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನೊಳಗೊಂಡ ವಿದ್ಯಾರ್ಥಿ ಚೇತನ ಆಯುಷ್‌ ಕಿಟ್‌ ಅನ್ನು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನೊಳಗೊಂಡ ವಿದ್ಯಾರ್ಥಿ ಚೇತನ ಆಯುಷ್‌ ಕಿಟ್‌ ಅನ್ನು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತಾಲೂಕಿನ ಬೊಮ್ಮೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಆಯುಷ್ ಕಿಟ್ ನೀಡುವ ಮೂಲಕ ಜಿಲ್ಲಾಮಟ್ಟದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಆಯುಷ್ ಇಲಾಖೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚೇತನ ಎನ್ನುವ ಆಯುಷ್ ಸೇವಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ 9 ವಸತಿ ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ನಾಲ್ಕು ತಿಂಗಳುಗಳ ಕಾಲ ನಿಯಮಿತವಾಗಿ ಆಯುಷ್ ವೈದ್ಯಾಧಿಕಾರಿಗಳು ಭೇಟಿ ನೀಡಿ, ವೈದ್ಯಕೀಯ ತಪಾಸಣೆ ಮಾಡಿ, ಔಷಧಿ ಸಸ್ಯಗಳ ಪರಿಚಯ, ಮನೆ ಮದ್ದು ಅರಿವು, ಸದೃಢ ಆರೋಗ್ಯಕ್ಕಾಗಿ ಉತ್ತಮ ಜೀವನ ಶೈಲಿ, ರೋಗ ನಿರೋಧಕ ಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಿಸಲು ಅನುಸರಿಸಬೇಕಾದ ವಿಧಾನಗಳ ಇತ್ಯಾದಿ ಆಯುಷ್ ವೈದ್ಯ ಪದ್ಧತಿಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರಿಗೆ, ಇತರೆ ಗಣ್ಯರಿಗೆ, ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಖರ್ಜೂರಾದಿ ಮಂಥ ಪಾನೀಯ ನೀಡಲಾಯಿತು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಸೇರಿದಂತೆ ಇತರೆ ಗಣ್ಯರು, ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಕಚೇರಿ ಸಿಬ್ಬಂದಿ ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ