ಅರಸೀಕೆರೆ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಕರ್ತವ್ಯದ ವೇಳೆ ತಮ್ಮ ಸುರಕ್ಷತೆಗೂ ಸಮಾನ ಆದ್ಯತೆ ನೀಡಬೇಕು ಎಂದು ನಗರಸಭೆ ಪೌರಾಯುಕ್ತ ಎಚ್. ಟಿ. ಕೃಷ್ಣಮೂರ್ತಿ ತಿಳಿಸಿದರು.ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿದಿನ ನಗರದ ಸ್ವಚ್ಛತೆಗಾಗಿ ಮುಂಜಾನೆಯಿಂದಲೇ ಕಾರ್ಯನಿರ್ವಹಿಸುವ ಸಿಬ್ಬಂದಿ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ಕರ್ತವ್ಯದ ಸ್ಥಳದಲ್ಲಿ ಯಾವುದೇ ರೀತಿಯ ಅಪಾಯ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಮುಖ್ಯ ಎಂದರು. ಪುರುಷ ಹಾಗೂ ಮಹಿಳಾ ಪೌರಕಾರ್ಮಿಕರಿಗೆ ಗುಣಮಟ್ಟದ ಶೂ, ಕೈಗವಸು, ಮಾಸ್ಕ್ ಸೇರಿದಂತೆ ವಿವಿಧ ರಕ್ಷಣಾತ್ಮಕ ಸಾಮಗ್ರಿಗಳನ್ನು ವಿತರಿಸಲಾಯಿತು. ಸಿಬ್ಬಂದಿಯ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡೇ ಈ ಪರಿಕರಗಳನ್ನು ಒದಗಿಸಲಾಗಿದ್ದು, ಅವುಗಳನ್ನು ಕಡ್ಡಾಯವಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.ಪೌರಕಾರ್ಮಿಕರಿಗೆ ನೀಡಿರುವ ಸಾಮಗ್ರಿಗಳು ಹಾಳಾದ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೆಚ್ಚುವರಿ ಪರಿಕರಗಳನ್ನು ಸಹ ಸಂಗ್ರಹಿಸಿಡಲಾಗಿದೆ. ಸ್ವಚ್ಛತಾ ಕಾರ್ಯದ ಸಂದರ್ಭದಲ್ಲಿ ವೈಯಕ್ತಿಕ ಸುರಕ್ಷತೆಯನ್ನು ನಿರ್ಲಕ್ಷಿಸದೆ ಆರೋಗ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕು. ನಗರಸಭೆ ಹಾಗೂ ಅಧಿಕಾರಿಗಳು ಸಿಬ್ಬಂದಿಯ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ಧರಿದ್ದಾರೆ ಎಂದು ಕೃಷ್ಣಮೂರ್ತಿ ಹೇಳಿದರು.ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಲಿಂಗರಾಜು, ರೇವಣ್ಣ ಸಿದ್ದಪ್ಪ, ಮಂಜುನಾಥ್ ಸೇರಿದಂತೆ ನಗರಸಭೆಯ ಪುರುಷ ಹಾಗೂ ಮಹಿಳಾ ಪೌರಕಾರ್ಮಿಕರು ಉಪಸ್ಥಿತರಿದ್ದರು.