ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು

KannadaprabhaNewsNetwork | Published : Jan 11, 2025 12:46 AM

ಸಾರಾಂಶ

ಶಿವಮೊಗ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜ.26ರಂದು ಜಿಲ್ಲಾಡಳಿತದ ವತಿಯಿಂದ ನಡೆಸಲಾಗುವ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಶಿವಮೊಗ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜ.26ರಂದು ಜಿಲ್ಲಾಡಳಿತದ ವತಿಯಿಂದ ನಡೆಸಲಾಗುವ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸ್ಥಾಪಿಸಲಾಗಿರುವ ಸಂವಿಧಾನದ ಪೀಠಿಕೆಯ ಉದ್ಘಾಟನೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹ್ವಾನಿತ ಗಣ್ಯರಿಂದ ನೆರವೇರಿಸಲು ಉದ್ದೇಶಿಸಲಾಗಿದೆ ಎಂದರು.ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರಲ್ಲದೇ ಧ್ವಜವಂದನೆ ಸ್ವೀಕರಿಸುವರು. ನಂತರ ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿರುವರು ಎಂದರು.

ವಿಶೇಷವಾಗಿ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರ ಗಣರಾಜ್ಯೋತ್ಸವ ಸಂದೇಶದ ನಂತರ ಜಿಲ್ಲೆಯಲ್ಲಿ ರಾಜ್ಯದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ಕ್ರೀಡಾಪಟುಗಳು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ, ಅಸಾಧಾರಣ ಪ್ರತಿಭೆಯ ಮಕ್ಕಳು ಹಾಗೂ ಸರ್ಕಾರಿ ಸೇವೆಯಲ್ಲಿ ಉತ್ತಮ ಸಾಧನೆಗೈದ ನೌಕರರನ್ನು ಗುರುತಿಸಿ ಇದೇ ವೇಳೆ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಅಂದು ಕಾರ್ಯಕ್ರಮದಲ್ಲಿ ಪೊಲೀಸ್‌ತಂಡ, ಪೊಲೀಸ್ ಬ್ಯಾಂಡ್, ಹೋಂಗಾರ್ಡ್ ಸೇರಿದಂತೆ ಶಿವಮೊಗ್ಗ ನಗರದ ಆಯ್ದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸುವರು. ಅಲ್ಲದೇ ಇದೇ ಮೊದಲ ಬಾರಿಗೆ ಶಿವಮೊಗ್ಗ ಮಹಾನಗರಪಾಲಿಕೆಯ ಪೌರಸೇವಾ ಕಾರ್ಮಿಕರು ಸಮವಸ್ತ್ರದೊಂದಿಗೆ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಂಗವಾಗಿ ಅಂದು ಸಂಜೆ ೪ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕೆಎಸ್ಆರ್‌ಪಿ ಮಾಚೇನಹಳ್ಳಿ ಪೊಲೀಸ್ ತಂಡದವರಿಂದ ಪೊಲೀಸ್ ಬ್ಯಾಂಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಲಾಗಿದ್ದು, ಅದರ ಉಸ್ತುವಾರಿಯನ್ನು ವಹಿಸಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾಯಿತ ಜನಪ್ರತಿನಿಧಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು ಎಂದರು.ಇದೇ ವೇಳೆ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ತಮ್ಮ ಆಡಳಿತದ ಕಟ್ಟಡಗಳನ್ನು, ನಗರದ ವಿವಿಧ ರಸ್ತೆ, ಸರ್ಕಾರಿ ಕಟ್ಟಡಗಳನ್ನು ಹಸಿರು ತೋರಣಗಳಿಂದ ಹಾಗೂ ವಿದ್ಯುದ್ಧೀಪಗಳಿಂದ ಅಲಂಕರಿಸುವುದು ಹಾಗೂ ವಿವಿಧ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲು ಸಂಬಂಧಿಸಿದ ಉಪಸಮಿತಿಗೆ ಜವಾಬ್ದಾರಿ ವಹಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this article