ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದೆ. ಮೇ 5 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಚುನಾವಣೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 18,84,040 ಮತದಾರರು ಇದ್ದು, 1972 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ 5952 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದರು.
ಸಿಸಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ವ್ಯವಸ್ಥೆ:ಜಿಲ್ಲೆಯ 1219 ಮತಗಟ್ಟೆಗಳ ಪೈಕಿ 299 ಸೂಕ್ಷ್ಮ ಹಾಗೂ 69 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ 610 ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಿ, ಸಿಸಿಟಿವಿ ಕ್ಯಾಮೆರಾ ಮೂಲಕ ನೇರವಾಗಿ ಮತಗಟ್ಟೆಗಳ ಲೈವ್ ವಿಡಿಯೋ ನೋಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಮತದಾನ ಸಮಯದಲ್ಲಿ ಅಹಿತಕರ ಘಟನೆ ಸೃಷ್ಟಿಸುವಂತಹ 11 ರೌಡಿಶೀಟರ್ ಪ್ರಕರಣಗಳಲ್ಲಿ 9 ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಘೊಷಣೆಯ ಬಳಿಕ ಈವರೆಗೆ ಜಿಲ್ಲೆಯಲ್ಲಿ ₹8.41 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.
ಎಡಿಸಿ ಮೊಹಮ್ಮದ್ ಝುಬೇರ್ ಸುದ್ದಿಗೋಷ್ಠಿಯಲ್ಲಿದ್ದರು.