ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ

KannadaprabhaNewsNetwork |  
Published : Mar 14, 2025, 12:33 AM IST
12ಎಚ್‌ಪಿಟಿ3- ಹೊಸಪೇಟೆಯಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿದರು.   | Kannada Prabha

ಸಾರಾಂಶ

ವಿಜಯನಗರ ಜಿಲ್ಲೆಯಲ್ಲಿ ಶಿಸ್ತುಬದ್ಧ, ಪಾರದರ್ಶಕ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ವಯ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ

ವಿದ್ಯಾರ್ಥಿಗಳು ವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಎಂ.ಎಸ್. ದಿವಾಕರ್ಕನ್ನಡಪ್ರಭ ವಾರ್ತೆ ಹೊಸಪೇಟೆ

ವಿಜಯನಗರ ಜಿಲ್ಲೆಯಲ್ಲಿ ಶಿಸ್ತುಬದ್ಧ, ಪಾರದರ್ಶಕ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ವಯ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾ.21ರಿಂದ ಏ.4 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಬಿಗಿಬಂದೋಬಸ್ತ್ ಕಲ್ಪಿಸಿ ಪರೀಕ್ಷಾ ನಿಯಮಗಳನ್ನು ಪಾಲಿಸುವ ಮೂಲಕ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 71 ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷಾ ಮುಖ್ಯ ಅಧೀಕ್ಷಕರು ಮಾರ್ಗಸೂಚಿಗಳನ್ನು ಅರ್ಥೈಸಿಕೊಂಡು ಅದರಂತೆ ಕರ್ತವ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ರಕ್ಷಣಾತ್ಮಕ ಕಾಂಪೌಂಡು ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ 21,429 ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ 1271 ಅಭ್ಯರ್ಥಿಗಳು ಸೇರಿದಂತೆ ಒಟ್ಟು 22700 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿನ ಸಿಸಿ ಕ್ಯಾಮೆರಾಗಳು, ವೆಬ್ ಕಾಸ್ಟಿಂಗ್‌ಗೆ ಪೂರಕ ಇಂಟರ್‌ನೆಟ್ ವ್ಯವಸ್ಥೆ ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಮತ್ತು ಪರೀಕ್ಷಾ ಅವಧಿಯಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಕೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ ಎಂದರು.

ಪರೀಕ್ಷಾ ದಿನದಂತೆ ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ಖಜಾನೆ ಇಲಾಖೆಯಲ್ಲಿನ ಪ್ರಶ್ನೆಪತ್ರಿಕೆಗಳನ್ನು ಸೂಕ್ತ ಪೊಲೀಸ್ ರಕ್ಷಣೆಯೊಂದಿಗೆ ಆಯಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳು ನಿಗಾ ವಹಿಸಬೇಕು. ಮುಖ್ಯೋಪಾಧ್ಯಾಯರು ಮತ್ತು ಪರೀಕ್ಷಾ ಅಧೀಕ್ಷಕರು ಸಮನ್ವಯತೆಯಿಂದ ಪರೀಕ್ಷೆಗಳನ್ನು ನಿರ್ವಹಿಸಬೇಕು. ಜಿಲ್ಲೆಯಲ್ಲಿ ಯಾವುದೇ ಕಹಿ ಘಟನೆಗಳು ಜರುಗದಂತೆ ನಿರ್ಲಕ್ಷ್ಯ ವಹಿಸದಂತೆ ನಿಯೋಜಿತ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಮಾತನಾಡಿ, ಪರೀಕ್ಷೆ ಸಂದರ್ಭದಲ್ಲಿ ಸಿಸಿಕ್ಯಾಮೆರಾ ಆಫ್ ಆಗದಂತೆ ಕ್ರಮ ವಹಿಸಬೇಕು. ಯಾವುದೇ ತಾಂತ್ರಿಕ ಸಮಸ್ಯೆಯಾದಲ್ಲಿ ಕೂಡಲೇ ಸರಿಪಡಿಸಬೇಕು. ಕ್ಯಾಮರಾ ಒಂದು ನಿಮಿಷಕ್ಕಿಂತ ಹೆಚ್ಚು ಬಂದ್ ಆಗಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಯುಪಿಎಸ್ ಬ್ಯಾಟರಿ ವ್ಯವಸ್ಥೆ ಇರಬೇಕು. ವೆಬ್‌ಕಾಸ್ಟಿಂಗ್ ಮಾದರಿಯಲ್ಲಿ ನಡೆಯುವ ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪರೀಕ್ಷೆಗಳನ್ನು ಭಯದಿಂದ ಎದುರಿಸದಂತೆ ಆತ್ಮವಿಶ್ವಾಸದಿಂದ ಎದುರಿಸಲು, ಜಾಗೃತಿ ಮೂಡಿಸಿ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆ ಇದ್ದಲ್ಲಿ ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಕುಡಿಯುವ ನೀರಿನ ಲಭ್ಯತೆಗೆ ಕ್ರಮಕೈಗೊಳ್ಳಬೇಕು ಎಂದರು.

ಜಿಪಂ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ತಾಲೂಕು ನೋಡಲ್ ಅಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?