ಕನ್ನಡಪ್ರಭ ವಾರ್ತೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ-ಪೌತಿ ಖಾತಾ ಆಂದೋಲನ–2 ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಂದ ವಿವಿಧ ಕಂದಾಯ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು. ನಂತರ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಂದಾಯ ಇಲಾಖೆಯ ಸೇವೆಗಳ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಸಿದ್ದಾಪುರ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಕಂದಾಯ ಸೌಲಭ್ಯಗಳ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರ್‌ಆರ್‌ಟಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ದೂರಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಧುಗಿರಿ ಪಟ್ಟಣದ ಸರ್ಕಾರಿ ಪಿಎಂಶ್ರೀ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಠ್ಯಪುಸ್ತಕಗಳ ಲಭ್ಯತೆ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಶಾಲಾ ಮುಖ್ಯ ಉಪಾಧ್ಯಾಯರೊಂದಿಗೆ ಚರ್ಚಿಸಿದರು.ನಂತರ ಶಾಲೆಯ ಬೆಳಗಿನ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಹಾಲಿನ ಗುಣಮಟ್ಟ ಮತ್ತು ಪೌಷ್ಟಿಕತೆಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪೌಷ್ಟಿಕ ಆಹಾರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ ಸೇರಿದಂತೆ ಕಂದಾಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.