ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಧಿಕೃತವಾಗಿ ಪರವಾನಗಿ ಹೊಂದಿರುವಂತಹ (ಬಂದೂಕು) ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶಿಸಿದ್ದಾರೆ.ಸಾರ್ವಜನಿಕ ಪ್ರದೇಶಗಳಲ್ಲಿ ಬಂದೂಕುಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಅನಧಿಕೃತ ಆಯುಧಗಳು ಮತ್ತು ಮದ್ದು ಗುಂಡುಗಳು ಕಂಡುಬಂದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈ ಆದೇಶ ಹೊರಡಿಸಿದ ದಿನಾಂಕದಿಂದ ಲೋಕಸಭಾ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗಿನ ಅವಧಿಯಲ್ಲಿ ಯಾವುದೇ ಶಸ್ತ್ರಾಸ್ತ್ರಗಳು, ಆಯುಧಗಳು ಮತ್ತು ಯಾವುದೇ ಮದ್ದುಗುಂಡುಗಳೊಂದಿಗೆ ಸಂಚರಿಸುವುದನ್ನು ಮತ್ತು ಅವುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆತ್ಮ ರಕ್ಷಣೆಗಾಗಿ, ಬೆಳೆ ರಕ್ಷಣೆಗಾಗಿ ಮತ್ತು ಇತರ ಉದ್ದೇಶಕ್ಕಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್, ಡಿಬಿಬಿಎಲ್, ಎಸ್‌ಬಿಎಂಎಲ್, ಡಿಬಿಎಂಎಲ್, ಎನ್‌ಪಿಬಿ ರೈಫಲ್, ರಿವಾಲ್ಟರ್, ಪಿಸ್ತೂಲ್) ಶಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ವಿವಿಧ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಕಡ್ಡಾಯವಾಗಿ ವಿಳಂಬ ಮಾಡದೆ ಠೇವಣಿ ಮಾಡಿ ರಶೀದಿ ಪಡೆತಕ್ಕದ್ದು.
ಸಂಬಂಧಪಟ್ಟ ಪೊಲೀಸ್ ಠಾಣೆಯವರು ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು (ಎಸ್‌ಬಿಬಿಎಲ್, ಡಿಬಿಬಿಎಲ್, ಎಸ್‌ಬಿಎಂಎಲ್, ಡಿಬಿಎಂಎಲ್, ಎನ್‌ಪಿಬಿ ರೈಫಲ್, ರಿವಾಲ್ಟರ್, ಪಿಸ್ತೂಲ್) ಠೇವಣಿ ಮಾಡಿಸಿಕೊಳ್ಳಲು ಕ್ರಮವಹಿಸುವುದು ಹಾಗೂ ಠೇವಣಿ ಮಾಡಿಸಿಕೊಂಡ ಅಯುಧಗಳ ಮಾಹಿತಿಯನ್ನು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸಲ್ಲಿಸುವುದು.ಚುನಾವಣಾ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ಒಳಗೆ ಶಸ್ತ್ರಾಸ್ತ್ರ ಠೇವಣಿ ಪಡೆದ ಠಾಣಾಧಿಕಾರಿಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳುವುದು.ಈ ನಿಷೇಧ ಆದೇಶವು ಸರ್ಕಾರಿ ಕರ್ತವ್ಯಕ್ಕೆ ಹಾಗೂ ಬ್ಯಾಂಕ್ ಸೆಕ್ಯೂರಿಟಿ ಸಂಸ್ಥೆಗಳ ಭದ್ರತೆ ಹಾಗೂ ಸಂರಕ್ಷತಾ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ವೇಳೆ ಶಸ್ತ್ರಾಸ್ತ್ರ ಆಯುಧ ಬಳಸುವುದಕ್ಕೆ ಅನ್ವಯವಾಗುವುದಿಲ್ಲ.
ಈ ಆದೇಶಕ್ಕೆ ವ್ಯತಿರಿಕ್ತವಾಗಿ ಹಾಗೂ ಯಾವುದೇ ರೀತಿಯ ಕಾನೂನು ಬಾಹಿರವಾಗಿ ಪರವಾನಿಗೆ ರಹಿತ ಶಸ್ತ್ರಾಸ್ತ್ರ, ಆಯುಧ ಇತ್ಯಾದಿಗಳ ಸಂಗ್ರಹಣೆ ಬಳಕೆ ಸಾಗಾಟ ಮಾಡುತ್ತಿರುವ ಸುಳಿವು ದೊರಕಿದಲ್ಲಿ ಈ ಬಗ್ಗೆ ಹತ್ತಿರ ಪೊಲೀಸ್ ಠಾಣೆಗೆ ತಕ್ಷಣವೇ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.