-ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ
------ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳು ಬಾಕಿ ತೆರಿಗೆ ಸಂಗ್ರಹಿಸಿ ಶೇಕಡವಾರು ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ವಸೂಲಿ ಮಾಡಿ ಗುರಿ ಸಾಧಿಸಿ, ಸರ್ಕಾರಿ ಇಲಾಖೆಗಳ ಬಾಕಿ ವಸೂಲಾತಿ ಕುರಿತು ಮೂರು ನೋಟಿಸ್ ಜಾರಿ ಮಾಡಿ ಕಡ್ಡಾಯವಾಗಿ ವಸೂಲಾತಿಯನ್ನು ಮಾಡಬೇಕು. ಹೆಚ್ಚು ಬಾಕಿ ಇರುವಲ್ಲಿ ಪೌರಾಯುಕ್ತರು, ಮುಖ್ಯ ಲೆಕ್ಕಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.ರಾಜ್ಯ ಮತ್ತು ಕೇಂದ್ರ ವಸತಿ ಯೋಜನೆಗಳು ಅನುಮೋದನೆಯಾದ ಫಲಾನುಭವಿಗಳಿಗೆ ಶೀಘ್ರವಾಗಿ ಮನೆಗಳನ್ನು ಪ್ರಾರಂಭಿಸಿ ಜೊತೆಗೆ ನಿಯಮಿತವಾಗಿ ಜಿಪಿಎಸ್ ಜಿಯೋ ಟ್ಯಾಗಗಳನ್ನು ಮಾಡಿ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದರು.ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ಕೈಗವಸು, ಶೂ ಇನ್ನಿತರ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳು ಒದಗಿಸಿ ಕಾಲ ಕಾಲಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಪೌರ ಕಾರ್ಮಿಕರಿಗೆ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಸಕಾಲ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ವೀಕೃತವಾಗುವ ಅರ್ಜಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಲೇಮಾರಿ ಮಾಡಬೇಕು ಎಂದರು.ನಗರೋತ್ಥಾನ ಹಂತ-4 ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಪ್ರಾರಂಭವಾಗಿರದ ಕಾಮಗಾರಿಗಳನ್ನು ಪರಿಶೀಲಿಸಿ ತುರ್ತಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಯಡಿ ವೈಯಕ್ತಿಕ ಕಾರ್ಯಕ್ರಮಗಳ ಕುರಿತು ಫಲಾನುಭವಿಗಳ ಪಟ್ಟಿಯನ್ನು ನಿಯಮಾನುಸಾರ ತಯಾರಿಸಿ ಸಲ್ಲಿಸಬೇಕು ಎಂದರು.
ನಗರದ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿ, ಸಾರ್ವಜನಿಕರು ಮನೆಯಲ್ಲಿ ಹಸಿ ಕಸ-ಒಣ ಕಸವನ್ನು ಬೇರ್ಪಡಿಸಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಲ್ಲಿ ಹಾಕಬೇಕು. ನಗರ ಸ್ಥಳೀಯ ಸಂಸ್ಥೆಗಳು ಕರಪತ್ರ, ಭಿತ್ತಿಪತ್ರ, ಜಾಗೃತಿ ಜಾಥಾ, ಡಂಗುರ ಮುಂತಾದವುಗಳ ಮೂಲಕ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಹೆಚ್ಚು ಮಾಡಬೇಕು ಎಂದು ನಿರ್ದೇಶಿಸಿದರು.ನಗರ ಸ್ಥಳೀಯ ಸಂಸ್ಥೆಗಳ ನಗರೋತ್ಥಾನ ಯೋಜನೆ, ಘನತ್ಯಾಜ್ಯ ನಿರ್ವಹಣೆ, 24*7 ಕುಡಿವ ನೀರು ಸರಬರಾಜು, ಯುಜಿಡಿ ಸೇರಿದಂತೆ ವಿವಿಧ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ವರದಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಯು ಹಲವು ಸಲಹೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಪೌರಾಯುಕ್ತ ಲಕ್ಷ್ಮಿಕಾಂತ, ಕಾರ್ಯಪಾಲಕ ಅಭಿಯಂತರ ಮಹೇಶ ಸುಲೇಗಾವ್, ಸಹಾಯಕ ಕಾರ್ಯಪಾಲಕ ಅಭಿಯಂತರ ರಜನಿಕಾಂತ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಅಭಿಯಂತರರು, ಸಿಬ್ಬಂದಿ ಇದ್ದರು.------
ಫೋಟೊ: 29ವೈಡಿಆರ್5:ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.