ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನುಸೂಚಿತ ಜಾತಿ, ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆ
ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅನುಸೂಚಿತ ಜಾತಿ, ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಒಂದು ವೇಳೆ ಹಾಜರಾಗದೆ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೂರುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂಧಿಸಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ, ಸಿಬ್ಬಂದಿ ಸೌಜನ್ಯ ಯುತವಾಗಿ ವರ್ತಿಸಬೇಕು ಎಂದರು.ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗಳಿಗೆ ಎಸ್.ಸಿ.ಎಸ್.ಪಿ., ಟಿಎಸ್ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ. 100 ರಷ್ಟು ಬಳಕೆಯಾಗಬೇಕು. ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿದ್ದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ. ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದ ಅವರು, ವಿವಿಧ ಇಲಾಖೆ ಗಳಿಗೆ ಮಂಜೂರಾಗಿರುವ ಅನುದಾನಕ್ಕೆ ಆಯಾ ಇಲಾಖೆಯಿಂದ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಜೂರಾತಿ ಪಡೆದು ನಿಗಧಿತ ಅವಧಿಯೊಳಗೆ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.