ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಯಬಿಡಲಾಗಿದ್ದು, ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಆಗುವವರೆಗೂ ಎಲ್ಲ ಇಲಾಖೆ ಅಧಿಕಾರಿಗಳು ನಿಗವಹಿಸಿ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಅಪಾಯಗಳಿಗೆ ಆಸ್ಪದ ಕೊಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟ ಹಿನ್ನೆಲೆ ಕಂಪ್ಲಿ ಕೋಟೆಯ ಬಳಿ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅವರು ಮಾತನಾಡಿದರುಈಗಾಗಲೇ ಗಂಜಿ ಕೇಂದ್ರ, ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನದಿಪಾತ್ರದ ಬಳಿ ಪೊಲೀಸರನ್ನು ನಿಯೋಜಿಸಲಾಗಿದ್ದು ಯಾವುದೇ ರೀತಿಯ ಅಪಾಯಗಳು ಜರುಗದಂತೆ ನಿಗಾವಹಿಸಲಾಗಿದೆ. ಸ್ಥಳೀಯರು ಹಾಗೂ ಮೀನುಗಾರರು ನದಿಗೆ ಇಳಿಯಬಾರದು. ಇನ್ನು ಯಾವುದೇ ರೀತಿಯ ತುರ್ತು ಸಂದರ್ಭಕ್ಕೆ ತಾಲ್ಲೂಕು ಆಡಳಿತ ಅಥವಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದರು.
ಗುರುವಾರ ಸಂಜೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ನದಿಗೆ ನೀರನ್ನು ಹರಿ ಬಿಡಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಸೇತುವೆ ಮೇಲಿನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಹರಿದು ಬರುವ ಸಾಧ್ಯತೆಗಳಿದ್ದು, ನದಿ ಪಾತ್ರ, ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿದರು.ನೂತನ ಸೇತುವೆ ನಿರ್ಮಾಣ ಹಾಗೂ ಸಾರಿಗೆ ಬಸ್ ಗಳ ಸಮಸ್ಯೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣ ವಿಚಾರ ಕುರಿತು ಸರ್ಕಾರ ಗಮನಕ್ಕೆ ತರಲಾಗುವುದು. ಇನ್ನು ಕಂಪ್ಲಿ ಮಾರ್ಗವಾಗಿ ತೆರಳುತ್ತಿದ್ದ ಎಲ್ಲಾ ಸಾರಿಗೆ ಬಸ್ ಗಳು ಪಟ್ಟಣಕ್ಕೆ ಬಂದೆ ಮುಂದೆ ತೆರಳಬೇಕು ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಬಳಿಕ ಕಂಪ್ಲಿ ಪಟ್ಟಣದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಡಿವೈಎಸ್ಪಿ ಗೋಕಲೆ, ತಹಶೀಲ್ದಾರ ಶಿವರಾಜ್, ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.