ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪೌರ ಕಾರ್ಮಿಕರ ಸಮಸ್ಯೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು ಎಂದ ಅವರು, ಸರ್ಕಾರ ಪೌರ ಕಾರ್ಮಿಕರಿಗೆ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡ ಬಾರದು ಎಂದರು. ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಕಡ್ಡಾಯವಾಗಿ ಗುರುತಿನ ಚೀಟಿ, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಅವರಿಗೆ ವಿಶ್ರಾಂತಿ ಗೃಹ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಸ ಸಂಗ್ರಹಣೆಗಾಗಿ ಬರುವ ಪೌರ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದ್ದು, ಕನಿಷ್ಠ ವೇತನವನ್ನಾದರೂ ನೀಡುವಂತೆ ಸಮಿತಿ ಸದಸ್ಯ ವೆಂಕಟೇಶ್ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಮೊದಲು ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಇನ್ನೂ ಒಂದು ತಿಂಗಳಲ್ಲಿ ಮುಗಿಯುತ್ತದೆ. ನಂತರ ಈ ಕುರಿತು ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಪ್ರತಿ ಮಾಹೆ 5ನೇ ತಾರೀಖಿನೊಳಗೆ ವೇತನ ಪಾವತಿಸಲು ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು. ಪೌರ ಕಾರ್ಮಿಕರಿಗೆ ರಜೆ ಮಂಜೂರು ಮಾಡಲು ಸಂಬಂಧಿಸಿದ ತಾಲೂಕು ವೈದ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ತಿಳಿಸಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.
25 ಕೆಸಿಕೆಎಂ 3ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೆಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿದರು.