ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

KannadaprabhaNewsNetwork | Published : Jan 14, 2025 1:01 AM

ಸಾರಾಂಶ

ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹೇಳಿದರು. ಗಣ್ಯರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು ಎಂದು ಈ ಸಂದರ್ಭ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜ.26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು. ಕಳೆದ ಬಾರಿಯಂತೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಹೊಸ ಹೊಸ ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಸರ್ಕಾರಿ ಹಾಗೂ ಬಾಲಕ ಮತ್ತು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು. ತಮ್ಮ ತಮ್ಮ ಕಚೇರಿಗಳಲ್ಲಿ ಅಂದು(ಜ.26) ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ 8.45 ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಹಾಗೂ ವಿಶಿಷ್ಟ ಸಾಧನೆ ಮಾಡಿರುವವರನ್ನು ಗುರುತಿಸಿ ಜ.18 ರೊಳಗೆ ಮಾಹಿತಿ ನೀಡುವಂತಾಗಬೇಕು. ಲ್ಯಾಪ್‌ಟಾಪ್ ವಿತರಣೆ ಮತ್ತಿತರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಹಬ್ಬದ ವಾತಾವರಣದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸುವಂತಾಗಬೇಕು. ಮಾಜಿ ಸೈನಿಕರನ್ನು ಆಹ್ವಾನಿಸುವುದು ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪಥಸಂಚಲನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಗಣರಾಜ್ಯೋತ್ಸವ ಸಂಬಂಧ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಘಟಕರಾದ ದಮಯಂತಿ ಮಾತನಾಡಿ ಗಣರಾಜ್ಯೋತ್ಸವ ಪೂರ್ವಭಾವಿಯಾಗಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗುತ್ತಿದ್ದು ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಭಾರತ್ ಸೇವಾದಳದ ಮೋಂತಿ ಗಣೇಶ್ ಮಾತನಾಡಿ, ಭಾರತ ಸೇವಾದಳ ವತಿಯಿಂದ ಧ್ವಜಾರೋಹಣ ಸಂಬಂಧ ಹಲವು ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಪ್ರೊಬೆಶನರ್ ಐಪಿಎಸ್ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಜಿ.ಪಂ.ಉಪಕಾರ್ಯದರ್ಶಿ ಎಸ್.ಧನರಾಜ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಜಿ.ಪಂ.ಎಂಜಿನಿಯರ್ ನಾಯಕ್, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಬಿಸಿಎಂ ಇಲಾಖೆ ವ್ಯವಸ್ಥಾಪಕರಾದ ಶಿವಶಂಕರ ವಿವಿಧ ನಿಗಮದ ವ್ಯವಸ್ಥಾಪಕರು, ಇತರರು ಇದ್ದರು.

ವಿವಿಧ ಮಹನೀಯರ ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ: ಇದೇ ಜನವರಿ, 19 ರಂದು ಮಹಾಯೋಗಿ ವೇಮನ ಜಯಂತಿ, ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ, ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.5 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಸರ್ಕಾರದ ನಿರ್ದೇಶನದಂತೆ ವಿವಿಧ ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಸಮಾಜದ ಪ್ರಮುಖರು ಜಯಂತಿ ಆಚರಣೆಗೆ ಜಿಲ್ಲಾಡಳಿತದ ಜೊತೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರು ಜಯಂತಿ ಆಚರಣೆ ಸಂಬಂಧ ಹಲವು ಸಲಹೆ ನೀಡಿದರು.

Share this article