ಗೋಕಾಕದ ಕಾಳಜಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

KannadaprabhaNewsNetwork |  
Published : Jul 29, 2024, 12:56 AM IST
ಗೋಕಾಕದ ಕಾಳಜಿ ಕೇಂದ್ರಳಿಗೆ ಸ್ಥಳಾಂತರಗೊಂಡಿರುವ ಕುಟುಂಬಸ್ಥರನ್ನು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಭೇಟಿಯಾಗಿ ಸಮಾಲೋಚನೆ ನಡೆಸಿದರು | Kannada Prabha

ಸಾರಾಂಶ

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭಾನುವಾರ ಗೋಕಾಕ ನಗರದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಘಟಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭಾನುವಾರ ಗೋಕಾಕ ನಗರದ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಘಟಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು.

ನಗರದ‌ ಸರ್ಕಾರಿ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಊಟೋಪಹಾರ ಮತ್ತಿತರ ಮೂಲಸೌಕರ್ಯ ಪರಿಶೀಲಿಸಿದರು.

ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರ ಜೊತೆಗೆ ಮಾತನಾಡಿದರು. ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದ್ದು, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಕಾಳಜಿ ಕೇಂದ್ರದಲ್ಲಿರುವ ಎಲ್ಲರಿಗೂ ಗುಣಮಟ್ಟದ ಊಟೋಪಹಾರ‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡ‌ ಒದಗಿಸಲಾಗಿದೆ ಎಂದು ಹೇಳಿದರು.

ನದಿತೀರದ ಕೆಲವು ಗ್ರಾಮಸ್ಥರು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಪ್ರತಿಯೊಬ್ಬರ ಜೀವ ಅಮೂಲ್ಯವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದರು. ಕಾಳಜಿ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ಊಟೋಪಹಾರ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಹಸೀಲ್ದಾರಗೆ ಸೂಚನೆ ನೀಡಿದರು.

ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ತುಂಬು ಗರ್ಭಿಣಿಯೊಬ್ಬರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೂಡಲೇ‌ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದರು.

ಪ್ರತಿ ತಾಲೂಕಿಗೆ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಕೂಡ ಪ್ರತಿದಿನ ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ‌ ನೀಡುವ ಮೂಲಕ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ‌ಕೈಗೊಳ್ಳಬೇಕು ಎಂದು ತಿಳಿಸಿದರು.

ಬಳಿಕ ಗೊಡಚಿನಮಲ್ಕಿ ಜಲಪಾತ ಪ್ರದೇಶ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ನೀರಿನ‌ ಹರಿವು ಹೆಚ್ಚಾಗಿರುವುದರಿಂದ ಅಗತ್ಯ ಎಚ್ಚರಿಕೆ ವಹಿಸುವಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗೆ ನಿರ್ದೇಶನ ನೀಡಿದರು.

ಗೋಕಾಕ‌ ತಹಸೀಲ್ದಾರ್‌ ಮೋಹನ ಭಸ್ಮೆ, ನೋಡಲ್‌ ಅಧಿಕಾರಿ ಬಸವರಾಜ ಕುರಿಹುಲಿ ಮತ್ತಿತರರು ಉಪಸ್ಥಿತರಿದ್ದರು.

ಸಹಾಯವಾಣಿಗೆ ಕರೆ ಮಾಡಲು ಮನವಿ:

ನದಿತೀರದ‌ ಗ್ರಾಮಸ್ಥರು ಪ್ರವಾಹದಿಂದ ಯಾವುದೇ ರೀತಿಯ ತೊಂದರೆ ಅಥವಾ ಅಪಾಯಕ್ಕೆ ಸಿಲುಕಿದರೆ ತಕ್ಷಣವೇ ಸಹಾಯವಾಣಿ‌ ಕೇಂದ್ರಕ್ಕೆ ಕರೆ‌ ಮಾಡಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಸಾರ್ವಜನಿಕರಲ್ಲಿ‌ ಮನವಿ ಮಾಡಿದ್ದಾರೆ.

* ಪ್ರವಾಹ ಸಹಾಯವಾಣಿ ಸಂಖ್ಯೆಗಳು-0831-2407290

* ಪೊಲೀಸ್ ಸಹಾಯವಾಣಿ-0831-2474054

* ತುರ್ತು ಸಹಾಯಕ್ಕಾಗಿ -112

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ : ಪತ್ರಕರ್ತ ವಶ
ಪೊಲೀಸ್ ವಾಹನದಲ್ಲಿ ಕುಡುಕರು ಮನೆಗೆ : ವ್ಯವಸ್ಥೆಗೆ ಆಕ್ಷೇಪ