ಅಕ್ರಮ ಮರಳು ಗಣಿಗಾರಿಕೆ ತಡೆಗೆ ಜಿಲ್ಲಾಧಿಕಾರಿ ತಾಕೀತು

KannadaprabhaNewsNetwork |  
Published : Dec 21, 2023, 01:15 AM IST
ಪೊಟೊ: 20ಎಸ್‌ಎಂಜಿಕೆಪಿ02ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‍ಫೋರ್ಸ್ ಮತ್ತು ಮರಳು ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್‌. ಸೆಲ್ವಮಣಿ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮತ್ತು ಮರಳು ಸಮಿತಿ ಸಭೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಗಣಿಕಾರಿಕೆ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಅಕ್ರಮ ಗಣಿಗಾರಿಕೆ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಸೀಲ್ದಾರ್‌, ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ತಾಕೀತು ಮಾಡಿದರು.

ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಆರ್‌.ಸೆಲ್ವಮಣಿ ಆದೇಶ । ಪ್ರಕರಣ ದಾಖಲಿಸಿ, ದಂಡ ವಿಧಿಸಲು ಸೂಚನೆ ಕನ್ನಡಪ್ರಭ ವಾರ್ತೆ ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಗಣಿಕಾರಿಕೆ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ಅಕ್ರಮ ಗಣಿಗಾರಿಕೆ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಸೀಲ್ದಾರ್‌, ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ತಾಕೀತು ಮಾಡಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮತ್ತು ಮರಳು ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಆಗುಂಬೆ ಬಳಿ, ಹೊಳಲೂರು, ಕೂಡ್ಲಿ, ಪುರಲೆ, ವೈಸನಹಳ್ಳಿ ಇನ್ನೂ ಹಲವೆಡೆ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಸೀಲ್ದಾರ್‌, ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಅಕ್ರಮ ಮರಳು, ಮಣ್ಣು ಜಂಬಿಟ್ಟಿಗೆ ಗಣಿಗಾರಿಕೆ ಮತ್ತು ಸಾಗಾಣಿಕೆ ಕಂಡು ಬರುವ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ವರೆಗೆ ವಾಹನಗಳಲ್ಲಿ ಗಸ್ತು ತಿರುಗಲು ತಂಡವನ್ನು ರಚಿಸಿ, ಕ್ರಮ ಕೈಗೊಂಡು ಪ್ರಕರಣಗಳನ್ನು ವರದಿ ಮಾಡಬೇಕು. ಮತ್ತು ತಾಲೂಕುಗಳಲ್ಲಿ ದಂಡ ಪ್ರಕ್ರಿಯೆ ಹೆಚ್ಚಬೇಕು. ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮದನ್ವಯ ಖನಿಜ ಸಾಗಾಣಿಕೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಉಪಕರಣವನ್ನು ಅಳವಡಿಸಬೇಕು. ಇಲ್ಲವಾದಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ಸೂಚನೆ ನೀಡಿದರು. ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ತಾಲೂಕು ಮರಳು ಉಸ್ತುವಾರಿ ಸಮಿತಿಯು ನಿಯಮಾನುಸಾರ ಕ್ರಮ ವಹಿಸಿ, ವಹಿಸಿದ ಕ್ರಮಗಳ ಕುರಿತು ವರದಿ ನೀಡಬೇಕು. ಕಳೆದ ಸಾಲಿನಲ್ಲಿ ಸರ್ಕಾರದ ಮರಳು ಕ್ವಾರಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಶಿವಮೊಗ್ಗ ಎಸಿಯವರಿಂದ ವರದಿ ಪಡೆದು ಕ್ರಮ ವಹಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗೆ ತಾಕೀತು ಮಾಡಿದರು.ಹಿರಿಯ ಭೂವಿಜ್ಞಾನಿ ನವೀನ್ ಮಾತನಾಡಿ, 2023-24 ನೇ ಸಾಲಿನ ನವೆಂಬರ್ ಅಂತ್ಯದವರೆಗೆ ₹ 23.32 ಕೋಟಿ ರಾಜಸ್ವ ಸಂಗ್ರಹಿಸುವ ಮೂಲಕ ಶೇ.105 ಗುರಿ ಸಾಧಿಸಲಾಗಿದೆ. ಅಕ್ರಮ ಉಪಖನಿಜ ಗಣಿಗಾರಿಕೆ, ಸಾಗಾಣಿಕೆ/ದಾಸ್ತಾನು ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಒಟ್ಟು ₹51.78 ಲಕ್ಷ ಹಾಗೂ ಪೊಲೀಸ್ ಇಲಾಖೆಯಿಂದ 19.11 ಲಕ್ಷ ರು.ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.ತುಂಗಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಇಂಜಿನಿಯರ್ ಅಕ್ರಮ ಮಣ್ಣು ಗಣಿಗಾರಿಕೆ ಪ್ರಕರಣಗಳಲ್ಲಿ ₹70,680 ದಂಡ ವಿಧಿಸಿರುತ್ತಾರೆ. ಸೊರಬ ತಹಸೀಲ್ದಾರ್ ಅಕ್ರಮ ಜಂಬಿಟ್ಟಿಗೆ ಸಾಗಾಣಿಕೆಗೆ ಸಂಬಂಧಿಸಿದಂತೆ ₹17,800 ದಂಡ ವಿಧಿಸಿದ್ದು, ಒಟ್ಟು ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ ₹71.79 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಗಣಿ ಗುತ್ತಿಗೆ ಅರ್ಜಿ, ಕಟ್ಟಡ ಕಲ್ಲು ಗಣಿಗಾರಿಕೆ ಮಂಜೂರಾತಿ, ಕಲ್ಲುಪುಡಿ ಮಾಡುವ ಘಟಕ ಸ್ಥಾಪನೆಗೆ ಅನುಮತಿ ಇತರೆ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಎಎಸ್ಪಿ ಅನಿಲ್‍ಕುಮಾರ್ ಭೂಮರೆಡ್ಡಿ, ತಹಸೀಲ್ದಾರ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌