)
ಕೊಪ್ಪಳ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಂಗಳವಾರ ಅಂತ್ಯಗೊಂಡಿತು.
ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆ ಸಂಕಷ್ಟಕ್ಕೆ ಸಿಲುಕಿವೆ. ಬಿತ್ತನೆ ಮಾಡಿರುವ ಬೆಳೆಗಳಿಗೆ ಅಗತ್ಯ ಪ್ರಮಾಣದಲ್ಲಿ ಮಳೆ ಬಾರದಿರುವುದರಿಂದ ರೈತರು ಆತಂಕಗೊಂಡಿದ್ದಾರೆ. ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.
ತುಂಗಭದ್ರಾ ನದಿ ಪಾತ್ರದ ಪ್ರದೇಶಗಳಲ್ಲಿ ರೈತರು ಈಗಾಗಲೇ ಭತ್ತದ ಸಸಿ ಮಡಿ ಮಾಡಿ, ನಾಟಿ ಕಾರ್ಯಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ನೀರಿನ ಕೊರತೆಯಿಂದ ಸಸಿ ಮಡಿ ಒಣಗುವ ಸ್ಥಿತಿ ನಿರ್ಮಾಣವಾಗಿದೆ. ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಗಮನದಲ್ಲಿಟ್ಟುಕೊಂಡು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕಾಗಿದೆ. ನೀರು ಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಮಳೆ ಕೊರತೆಯಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರ ಬದುಕು ಉಳಿಸಲು ಸರ್ಕಾರ ತಕ್ಷಣವೇ ಬರ ಪರಿಸ್ಥಿತಿಯ ಕುರಿತು ಸಮಗ್ರ ಸಮೀಕ್ಷೆ ನಡೆಸಬೇಕು. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದರ ಜತೆಗೆ ಕುಡಿವ ನೀರು, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ, ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ಧಡೇಸ್ಗೂರು, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ ಗುಳಗಣ್ಣವರ, ಡಾ. ಬಸವರಾಜ ಕ್ಯಾವಟರ್, ಶರಣು ತಳ್ಳಿಕೇರಿ, ಬಸವರಾಜ ಗೌರ, ಅಪ್ಪಣ್ಣ ಪದಕಿ, ಚಂದ್ರು ಕವಲೂರು, ಕೀರ್ತಿ ಪಾಟೀಲ, ಸುನೀಲ್ ಹೆಸರೂರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.