ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ

KannadaprabhaNewsNetwork |  
Published : Jul 31, 2026, 02:15 AM IST
ಯಲಬುರ್ಗಾದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಯಲಬುರ್ಗಾ ಕ್ಷೇತ್ರದಲ್ಲಿ ಹೆಸರು,ಸಜ್ಜೆ, ಮೆಕ್ಕೆಜೋಳ, ತೊಗರಿ, ಅಲಸಂದೆ ಸೇರಿದಂತೆ ಇನ್ನಿತರ ಬೆಳೆಗಳು ಸಂಪೂರ್ಣ ಹಾನಿಯಾಗಿವೆ

ಯಲಬುರ್ಗಾ: ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಬಿತ್ತಿದ ಬೆಳೆ ಸಂಪೂರ್ಣ ಒಣಗಿವೆ. ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣವರ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಜೂನ್ ಹಾಗೂ ಜುಲೈನಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಬೆಳೆಗಳು ಹಾಳಾಗಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರದ ಬಗ್ಗೆ ವಾಸ್ತವ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಸಮರ್ಪಕ ಮಾಹಿತಿ ನೀಡುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಯಲಬುರ್ಗಾ ಕ್ಷೇತ್ರದಲ್ಲಿ ಹೆಸರು,ಸಜ್ಜೆ, ಮೆಕ್ಕೆಜೋಳ, ತೊಗರಿ, ಅಲಸಂದೆ ಸೇರಿದಂತೆ ಇನ್ನಿತರ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಸರ್ಕಾರ ಪ್ರತಿ ಎಕರೆಗೆ ₹೫೦ ಸಾವಿರ ಪರಿಹಾರ ನೀಡಬೇಕು. ತಕ್ಷಣ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದರು.

ರಾಜ್ಯದಲ್ಲಿ ಜನ ಸಂಕಷ್ಟ ಎದರಿಸುತ್ತಿದ್ದರೂ ಸಿಎಂ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ಇಲ್ಲದೆ ಕೃಷಿ ಸಚಿವರೂ ಇಲ್ಲದಿರುವುದರಿಂದ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರೈತರು ಕೃಷಿ ಭೂಮಿ ಮಾರಾಟ ಮಾಡಬೇಡಿ:

ಕ್ಷೇತ್ರದ ರೈತರು ಯಾವುದೇ ಕಾರಣಕ್ಕೂ ತಮ್ಮ ಕೃಷಿ ಭೂಮಿಯನ್ನು ಸೋಲಾರ್, ವಿಂಡ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಬಾರದು. ಅನ್ನದಾತರು ಭೂಮಿ ಮಾರಾಟ ಮಾಡಿದರೆ ಮತ್ತೆ ಅದನ್ನು ಮರಳಿ ಪಡೆಯುವುದು ಕಷ್ಟ. ಜಿಲ್ಲೆಯಲ್ಲಿ ಖಾಸಗಿ ಕಂಪನಿಗಳಿಂದ ರೈತರಿಗೆ ಅನ್ಯಾಯವಾಗುತ್ತಿರುವ ಆರೋಪಗಳಿದ್ದು, ರೈತರ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಎಸ್ಪಿಗೆ ಮನವಿ ಮಾಡಲಾಗಿದೆ ಎಂದರು.

ಪಕ್ಷ ಅವಕಾಶ ನೀಡಿದರೆ ೨೦೨೮ಕ್ಕೆ ಸ್ಪರ್ಧೆ: ನಮ್ಮ ಕುಟುಂಬ ಹಲವು ದಶಕಗಳಿಂದ ಬಿಜೆಪಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದೆ. ಕಳೆದ ೧೩ ವರ್ಷದಿಂದ ಜಿಲ್ಲೆ, ರಾಜ್ಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಶ್ರಮಿಸುತ್ತಿದ್ದೇನೆ. ಪ್ರಸ್ತುತ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇ‌ನೆ. ಒಂದು ವೇಳೆ ಪಕ್ಷವು ನನಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದರೆ ೨೦೨೮ರ ಚುನಾವಣೆಯಲ್ಲಿ ಸ್ಪರ್ಧೆ ನಿಶ್ಚಿತ. ಜಿಲ್ಲೆಯ ಹಾಲಿ, ಮಾಜಿ ಶಾಸಕರು ಮತ್ತು ಮುಖಂಡರ ನೇತೃತ್ವದಲ್ಲಿ ಪಕ್ಷದ ಸಂಘಟನೆಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.

ಈ ಸಂದರ್ಭ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯಕುಮಾರ್ ತಾಳಕೇರಿ, ಸೋಮಶೇಖರಗೌಡ ಪಾಟೀಲ್, ಪ್ರವೀಣ್ ಗುಳಗಣ್ಣವರ, ವಿರೂಪಾಕ್ಷ ಕುರಿ, ಬಸಯ್ಯ ಮೈಸೂರುಮಠ, ನವೀನ ಮಾಟೂರು, ನಾರಾಯಣ, ರಾಕೇಶ ಹೊಸ್ಮನಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ರಕ್ಷಣೆಗೆ ಸೂಕ್ತ ಕಾನೂನು ಅರಿವು ನೀಡುವುದು ಅತ್ಯಗತ್ಯ: ಹುಲಗಪ್ಪ ಡಿ.
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಬಾರದು: ಜಾನಕಿ ಕೆ.ಎಂ.