ಕನ್ನಡಪ್ರಭ ವಾರ್ತೆ, ತುಮಕೂರುನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 17ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ.ಕರೀಗೌಡ ಬೀಚನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನ ಅಂಗವಾಗಿ ಡಿಸೆಂಬರ್ 29 ರ ಬೆಳಿಗ್ಗೆ 7.30 ಗಂಟೆಗೆ ಗಾಜಿನ ಮನೆ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ 8 ಗಂಟೆಗೆ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಪ್ರಾರಂಭವಾಗಿ ಎಂ.ಜಿ.ರಸ್ತೆ, ಗುಂಚಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ಡಿಸೆಂಬರ್ 29ರ ಬೆಳಿಗ್ಗೆ 10 ಗಂಟೆಗೆ ಗಾಜಿನ ಮನೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಸಮ್ಮೇಳನದ ನೆನಪಿನ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಲೇಖಕರು, ಕಲಾವಿದರು, ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಾರ್ವಜನಿಕರು ಸೇರಿದಂತೆ ೪,೦೦೦ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಡಿಸೆಂಬರ್ 29ರಂದು ರಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಹಿರಿಯ ಲೇಖಕರಾದ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕುವೆಂಪು ಅವರ ಜೀವನ ಮತ್ತು ಸಾಹಿತ್ಯ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ದಲಿತ ಸಾಹಿತ್ಯ ಕವಿಗೋಷ್ಠಿ ಹಾಗೂ ಮಕ್ಕಳ ಗೋಷ್ಠಿ ಸೇರಿದಂತೆ ಆರು ವಿಚಾರ ಗೋಷ್ಠಿಗಳು ಇರಲಿವೆ. ಮಕ್ಕಳ ಕವಿ ಗೋಷ್ಠಿ ಇದೆ ಮೊದಲ ಬಾರಿಗೆ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು. ಅಲ್ಲದೆ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು. ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರು, ಸರ್ಕಾರಿ ನೌಕರರಿಗೆ 2 ದಿನಗಳು ಒ.ಒ.ಡಿ. ಸೌಲಭ್ಯ ನೀಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ-ಸಿಬ್ಬಂದಿ, ಸಾಹಿತಿಗಳು, ಕಲಾವಿದರು, ಲೇಖಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು. ಪತ್ರಿಕಾ ಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಇದ್ದರು.