ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

KannadaprabhaNewsNetwork |  
Published : Jan 15, 2026, 01:45 AM IST
14ಎಚ್ಎಸ್ಎನ್16 :  | Kannada Prabha

ಸಾರಾಂಶ

ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗುತ್ತಿವೆ. ಜ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಇದೇ ತಿಂಗಳ ೨೦ ಮತ್ತು ೨೧ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಕೃಷ್ಣಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗುತ್ತಿವೆ. ಜ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಭಾಗವಹಿಸುವರು ಎಂದು ಮಾಹಿತಿ ನೀಡಿದರು.ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸರ್ಕಾರಿ ನೌಕರರ ಜೊತೆಗೆ ನಗರದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳೂ ಪಾಲ್ಗೊಂಡು ಸಂಜೆ ೬ ಗಂಟೆಯ ನಂತರ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಹೇಳಿದರು.ಕ್ರೀಡಾಕೂಟಕ್ಕೆ ಆನ್‌ಲೈನ್ ನೋಂದಣಿ ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಲಿಂಕ್ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಸುಮಾರು ೨,೮೦೦ ಮಂದಿ ನೋಂದಣಿ ಮಾಡಿಕೊಂಡಿದ್ದು, ಜ.೧೬ರ ವರೆಗೆ ನೋಂದಣಿಗೆ ಅವಕಾಶವಿದೆ. ಒಟ್ಟು ೩,೫೦೦ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಇಲ್ಲಿ ಗೆದ್ದವರು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಅರ್ಹರಾಗಲಿದ್ದು, ಅಲ್ಲಿಂದ ೧೦೦ ಮಂದಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ. ಇದರಿಂದ ಸರ್ಕಾರಿ ನೌಕರರ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಗಲಿದೆ ಎಂದರು.ಕ್ರೀಡಾಕೂಟಕ್ಕೆ ತೀರ್ಪುಗಾರರು ನೇಮಕವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಹಿಸಿಕೊಳ್ಳಲಿದೆ. ಇಂತಹ ಕಾರ್ಯಕ್ರಮಗಳಿಂದ ನೌಕರರ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ. ಎಲ್ಲರೂ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಅಭಿವೃದ್ಧಿಗೆ ರಾಜ್ಯಾಧ್ಯಕ್ಷರ ಅಡ್ಡಿ:

ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯದಂತಹ ಚಟುವಟಿಕೆ ಕೈಗೊಳ್ಳಲು ಸಂಘದ ರಾಜ್ಯಾಧ್ಯಕ್ಷರು ಅನುಮತಿ ನೀಡುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು. ಸಂಘದ ಕಟ್ಟಡ ನವೀಕರಣ ಪೂರ್ಣಗೊಂಡಿದ್ದರೂ, ಕೊಠಡಿಗಳನ್ನು ಬಾಡಿಗೆಗೆ ನೀಡಲು ಅಡ್ಡಿಪಡಿಸಲಾಗುತ್ತಿದೆ. ಹಾಲಿ ನಾಲ್ಕು ಕೊಠಡಿಗಳನ್ನು ನವೀಕರಿಸಿದರೂ ಅವುಗಳನ್ನು ಬಳಸಲು ಅವಕಾಶ ನೀಡದೆ, ಸಂಘಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಯೊಂದು ಕೆಲಸಕ್ಕೂ ಪೂರ್ವಾನುಮತಿ ಬೇಕೆಂದು ಒತ್ತಾಯಿಸಲಾಗುತ್ತಿದೆ. ಮಾತೆತ್ತಿದರೆ ಬೈಲಾ ನಿಯಮ ಉಲ್ಲಂಘನೆ ಎಂದು ಆರೋಪಿಸಲಾಗುತ್ತದೆ. ಅಧ್ಯಕ್ಷರಿಗೆ ಪರಮಾಧಿಕಾರ ಇರುವುದರಿಂದ ಶಿಸ್ತುಕ್ರಮದ ನೋಟಿಸ್‌ಗಳನ್ನು ನೀಡಲಾಗುತ್ತಿದೆ. ಈ ಕಾರಣದಿಂದ ಸಂಘದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮದಾನ ಹೊರಹಾಕಿದರು. ಮುಂದಾದರೂ ಅಭಿವೃದ್ಧಿ ಕೆಲಸಕ್ಕೆ ಅವಕಾಶ ಕೊಡುವರೊ ಕಾದು ನೋಡಬೇಕಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ. ಲಕ್ಷ್ಮಿಕಾಂತ್, ಖಜಾಂಚಿ ಬಿ.ಆರ್‌. ಹೇಮಂತ್, ನಿರ್ದೇಶಕರಾದ ಆಶಾ, ರವೀಂದ್ರ, ಎ.ಟಿ. ವೆಂಕಟೇಶ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ