ಕನ್ನಡಪ್ರಭ ವಾರ್ತೆ ವಿರಾಜಪೇಟೆ
ವಿರಾಜಪೇಟೆ ತಾಲೂಕು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಜನಸ್ಪಂದನ’ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಕಂದಾಯ, ಗ್ರಾಮೀಣಾಭಿವೃದ್ಧಿ, ಸೆಸ್ಕ್, ಅರಣ್ಯ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆ, ವಸತಿ ಯೋಜನೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸುವುದು ಸೇರಿದಂತೆ ಸುಮಾರು 74 ಅರ್ಜಿಗಳು ಸಲ್ಲಿಕೆಯಾದವು.ಅರ್ಜಿಗಳಿಗೆ ಸಂಬಂಧಿದಂತೆ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.
ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಿವೇಶನ ಒದಗಿಸುವಂತೆ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಹರಿಗೆ ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿವೇಶನ ಒದಗಿಸಿ ವಸತಿ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸುಮಾರು 70 ಕ್ಕೂ ಹೆಚ್ಚು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅಲೆಸಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ನನ್ನ(ಉಸ್ತುವಾರಿ ಸಚಿವರ) ನೇತೃತ್ವದಲ್ಲಿ 3 ಜನಸ್ಪಂದನಾ ಸಭೆಗಳು ನಡೆದಿದೆ. ಹಾಗೆಯೇ ಶಾಸಕರ ನೇತೃತ್ವದಲ್ಲಿಯೂ ಜನಸ್ಪಂದನಾ ಸಭೆಗಳು ನಡೆದಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಕಿವಿಗೊಡಬೇಕು ಎಂದು ಸಚಿವರು ತಾಕೀತು ಮಾಡಿದರು.‘ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಾಗಿದೆ. ಜನರಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಆತ್ಮತೃಪ್ತಿಯಿಂದ ಕಾರ್ಯನಿರ್ವಹಿಸಬೇಕು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.’
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಸರ್ಕಾರ ಬಡವರು ಹಾಗೂ ಶೋಷಿತರ ಪರವಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕಾಲಮಿತಿಯಲ್ಲಿ ತಲುಪಿಸಬೇಕು. ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು.‘ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿಗಳ ಕಾಳಜಿ ಮತ್ತು ಬದ್ಧತೆ ಅತಿಮುಖ್ಯವಾಗಿದೆ. ಆ ದಿಸೆಯಲ್ಲಿ ಜನಪ್ರತಿನಿಧಿಗಳು ಹೇಗೆ ಸ್ಪಂದಿಸುತ್ತಾರೆ. ಅದರಂತೆ ಅಧಿಕಾರಿಗಳು ಸಹ ಸಾರ್ವಜನಿಕರಿಗೆ ಸ್ಪಂದಿಸಬೇಕು. ಇದರಿಂದ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾಣಲು ಸಾಧ್ಯ ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು.’
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸರ್ಕಾರ ಜನರ ಬಳಿಗೆ ತೆರಳಿ ಸಾರ್ವಜನಿಕರಿಗೆ ಆಗಬೇಕಿರುವ ಕಾರ್ಯಗಳನ್ನು ತಕ್ಷಣ ಬಗೆಹರಿಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಜನಸ್ಪಂದನಾ ಸಭೆ ಆಯೋಜಿಸಲಾಗಿದೆ ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರೊಬೆಷನರಿ ಎಸ್‌ಪಿ ಬೆನಕ ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರು, ಗ್ರಾ.ಪಂ.ಅಧ್ಯಕ್ಷರು. ತಹಸೀಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.