ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಏಪ್ರಿಲ್ 5 ಮತ್ತು 6ರಂದು ನಗರದ ನೆಹರೂ ಕ್ರೀಡಾಂಗಣ ಮತ್ತು ನಗರದ ವಿವಿಧ ಸಮನಾಂತರ ವೇದಿಕೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಗೆ ನಿಯಮಾನುಸಾರ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ಎಲ್ಲಾ ಸ್ಪರ್ಧಾಳುಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಸ್ಪರ್ಧಿಸುವಂತೆ ಹಾಗೂ ವಿಜೇತರಾಗಿ ಸ್ಥಾನ ಪಡೆದ ಕ್ರೀಡಾಳುಗಳು ರಾಜ್ಯ ಮಟ್ಟದಲ್ಲಿ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರತಿನಿಧಿಗಳಾಗಿ ಭಾಗವಹಿಸಿ, ಜಯಶಾಲಿಗಳಾಗಿ ಆಗಮಿಸುವಂತೆ ಆಶಿಸಿದರು.ಕ್ರೀಡಾಕೂಟವು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸೂಕ್ತವಾದ ತೀರ್ಪುಗಾರರನ್ನು ನಿಯೋಜಿಸಬೇಕು ಎಂದು ತಾಕೀತು ಮಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ನಡೆಸಲಾದ ಕ್ರೀಡೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಈ ಅವಧಿಯಲ್ಲಿ ಕ್ರೀಡಾಳುಗಳಿಗೆ ಉತ್ತಮ ಉಟೋಪಚಾರ ಹಾಗೂ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಉತ್ತಮವಾದ ಸ್ಮರಣಿಕೆ ಮತ್ತು ಪ್ರಶಸ್ತಿ ಪ್ತತ್ರಗಳನ್ನು ಪ್ರದಾನ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಕಾರ್ಯದರ್ಶಿ ಆರ್.ಪಾಪಣ್ಣ, ಸಿದ್ಧಬಸಪ್ಪ, ಡಾ.ಸಿ.ಎ.ಹಿರೇಮಠ್, ದಿನೇಶ್, ಮತ್ತಿತರರು ಉಪಸ್ಥಿತರಿದ್ದರು.