ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮಿಸಿ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Jan 25, 2024, 02:01 AM IST
ಬೇಟಿ ಬಚಾವೋ ಬೇಟಿ ಪಡಾವೋ ಪೋಸ್ಟರ್ ಬಿಡುಗಡೆ | Kannada Prabha

ಸಾರಾಂಶ

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಮನೆಯಲ್ಲಿ ಹೆಣ್ಣು ಮಕ್ಕಳು ಜನಿಸಿದಾಗ ಸಂಭ್ರಮ ಪಡಬೇಕು, ಜೊತೆಗೆ ಅವಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂಬುದೇ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಗುರಿಯಾಗಿದ್ದು, ಇದನ್ನು ಸಕಾರಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದ್ದಾರೆ.

ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರೂ ಸಹ ಅವರು ಕ್ರಮಿಸುವ ಹಾದಿ ಇನ್ನೂ ಬಹಳಷ್ಟಿದೆ. ಶೇ. 24 ರಷ್ಟು ಹೆಣ್ಣು ಮಕ್ಕಳು ಮಾತ್ರ ಉನ್ನತ ಶಿಕ್ಷಣ, ಶೇ.13 ರಷ್ಟು ಮಂದಿ ಹೆಣ್ಣುಮಕ್ಕಳು ಮಾತ್ರ ಐಎಎಸ್ ಪಡೆದಿದ್ದು, ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಪ್ರತಿಯೊಬ್ಬ ಪುರುಷನ ಬದುಕಿನ ಅವಿಭಾಜ್ಯ ಅಂಗ ಮಹಿಳೆ. ಆ ಹೆಣ್ಣು ಮಗುವನ್ನು ಗುರುತಿಸಿ, ಗೌರವಿಸುವ ಸಲುವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮಹತ್ವ ಮತ್ತು ಮಕ್ಕಳ ಹಕ್ಕುಗಳ ಕುರಿತು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀ ರಾಮ್‌ರಾವ್ ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಮತ್ತು ನಿಯಂತ್ರಣ ಕುರಿತು ಮಾಹಿತಿ ನೀಡಿದರು.

ಬೇಟಿ ಬಚಾವೋ ಬೇಟಿ ಪಡಾವೋ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಎಎಸ್‌ಪಿ ಸಿದ್ಧಲಿಂಗಪ್ಪ ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಬಿ ಫುರ್ಟಾಡೋ ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೀಪಾ ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ನಿರೂಪಣಾಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ