ಕಾರಟಗಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಡಾ. ರವೀಂದ್ರನಾಥ ಮೇಟಿ ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯವೈಖರಿ ಪರಿಶೀಲಿಸಿದರು. ಲೋಪ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆಸ್ಪತ್ರೆಯ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ ಅವರು, ಸರ್ಕಾರದ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಔಷಧಗಳನ್ನು ಖರೀದಿಸಬೇಕು. ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ಅರಿವಳಿಕೆ ತಜ್ಞರ ನೇಮಕಕ್ಕೆ ಕ್ರಮ: ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಕುರಿತು ಮಾತನಾಡಿದ ಅವರು, ಬಹುತೇಕ ಹುದ್ದೆಗಳು ಭರ್ತಿಯಾಗಿವೆ. ಆದರೆ ಅರಿವಳಿಕೆ (ಅನಸ್ತೇಷಿಯಾ) ತಜ್ಞ ವೈದ್ಯರ ಕೊರತೆ ಇರುವುದರಿಂದ ಶಸ್ತ್ರಚಿಕಿತ್ಸೆ ಸ್ಥಗಿತಗೊಂಡಿದೆ. ಶೀಘ್ರದಲ್ಲೇ ಅರಿವಳಿಕೆ ತಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಸಾರ್ವಜನಿಕರಿಂದ ಬಂದಿರುವ ದೂರುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ವೈದ್ಯರು ಹಾಗೂ ಸಿಬ್ಬಂದಿ ವಿಭಾಗವಾರು ಜವಾಬ್ದಾರಿ ವಹಿಸಿಕೊಂಡು ಆಸ್ಪತ್ರೆಯ ಸ್ವಚ್ಛತೆ, ಔಷಧಗಳ ಲಭ್ಯತೆ ಹಾಗೂ ರೋಗಿಗಳ ಸೇವೆಗೆ ಆದ್ಯತೆ ನೀಡಬೇಕು ಎಂದರು. ಯಾವುದೇ ಲೋಪ ಕಂಡುಬಂದರೆ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.
ಆಸ್ಪತ್ರೆಯ ಕಾರ್ಯವೈಖರಿ ಕುರಿತು ಆರೋಗ್ಯ ಸಚಿವರು ಸೇರಿದಂತೆ ಮೇಲಧಿಕಾರಿಗಳಿಗೆ ವ್ಯಾಪಕ ದೂರುಗಳು ಬಂದಿವೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಜಾಗ ಖಾಲಿ ಮಾಡಬೇಕಾಗುತ್ತದೆ ಎಂದು ಡಾ. ಮೇಟಿ ಖಡಕ್ ಎಚ್ಚರಿಕೆ ನೀಡಿದರು.