ಗ್ಯಾರಂಟಿ ಯೋಜನೆ ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ : ಶಿವಾನಂದಸ್ವಾಮಿ

KannadaprabhaNewsNetwork | Published : Mar 18, 2025 12:32 AM

ಸಾರಾಂಶ

ಚಿಕ್ಕಮಗಳೂರು, ಪಂಚ ಗ್ಯಾರಂಟಿ ಯೋಜನೆ ಸದ್ಬಳಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನಲ್ಲಿದ್ದು, ಪ್ರಥಮ ಸ್ಥಾನದಿಂದ ಕೈಜಾರದಂತೆ ವಿವಿಧ ಇಲಾಖೆ ಅಧಿಕಾರಿ ವೃಂದದೊಂದಿಗೆ ಸಭೆ ನಡೆಸಿ ಸಾಧಕ ಬಾಧಕ ಚರ್ಚಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪಂಚ ಗ್ಯಾರಂಟಿ ಯೋಜನೆ ಸದ್ಬಳಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನಲ್ಲಿದ್ದು, ಪ್ರಥಮ ಸ್ಥಾನದಿಂದ ಕೈಜಾರದಂತೆ ವಿವಿಧ ಇಲಾಖೆ ಅಧಿಕಾರಿ ವೃಂದದೊಂದಿಗೆ ಸಭೆ ನಡೆಸಿ ಸಾಧಕ ಬಾಧಕ ಚರ್ಚಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು.

ಜಿಲ್ಲಾ ಪಂಚಾಯಿತಿ ಗ್ಯಾರಂಟಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರ ₹51 ಸಾವಿರ ಕೋಟಿಯನ್ನು ಗ್ಯಾರಂಟಿಗೆ ಮೀಸಲಿಟ್ಟು ಬಹುದೊಡ್ಡ ತೀರ್ಮಾನ ಕೈಗೊಂಡಿದೆ. ಅಲ್ಲದೇ ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲೂ ಅಧ್ಯಕ್ಷರು ಸಭೆಗಳನ್ನು ನಡೆಸಿ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ಏಪ್ರೀಲ್ 2024 ರಿಂದ 2025 ರವರೆಗೆ ಗೃಹಲಕ್ಷ್ಮಿ ಯೋಜನೆಯಡಿ 2,70,273 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು ಒಟ್ಟು ₹52,25,18,000 ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಹಿಸಲಾಗಿದೆ ಎಂದ ಅವರು, ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಬಾಕಿ ಇರುವ ಫಲಾನುಭವಿಗಳಿಗೆ ಹಣ ವರ್ಗಾಹಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು. ಶಕ್ತಿ ಯೋಜನೆ ಮಹಿಳಾ ಸಬಲೀಕರಣದ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,64,99,536 ಅಭ್ಯರ್ಥಿಗಳು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆ ಸೌಲಭ್ಯ ಪಡೆದಿದ್ದಾರೆ. ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಉದ್ದೇಶದಿಂದ ಜಾರಿಗೆ ತಂದ ಯುವನಿಧಿ ಯೋಜನೆಯಡಿ ಜಿಲ್ಲೆಯಾದ್ಯಂತ 3,935 ನೋಂದಾಯಿತ ಫಲಾನುಭವಿಗಳು ₹4,70,95,500 ಯೋಜನೆಯ ಲಾಭ ಪಡೆದಿದ್ದಾರೆ ಎಂದ ಅವರು, ಪ್ರತಿ ತಿಂಗಳು ಸಾರ್ವಜನಿಕರನ್ನೊಳಗೊಂಡ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ವಿವಿಧ ತಾಂತ್ರಿಕ ದೋಷಗಳಿಂದ ಪಂಚ ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿರುವವರನ್ನು ಗುರುತಿಸಿ ಯೋಜನೆ ಫಲ ದೊರಕಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ 2,59,634 ಪಡಿತರ ಚೀಟಿದಾರರಿದ್ದಾರೆ. ಇವುಗಳಲ್ಲಿ 2,49,481 ಪಡಿತರ ಚೀಟಿಗಳು ಡಿಬಿಟಿ ಯೋಜನೆಗೆ ಅರ್ಹವಾಗಿದೆ. ಮಾರ್ಚ್ ತಿಂಗಳಿಂದ ಫೆಬ್ರವರಿ ಹಾಗೂ ಈ ತಿಂಗಳ ಪಡಿತರವನ್ನು ಹಣದ ಬದಲಾಗಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ವಿತರಿಸಲು ಸರ್ಕಾರ ಮುಂದಾಗಿದೆ.

ಯಾವ ಯಾವ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆಯಾಗಿಲ್ಲ ಅಂತಹ ಪಡಿತರದಾರರ ಹಾಗೂ ಅವರು ಯಾವ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುತ್ತಾರೆಂಬ ಮಾಹಿತಿಯನ್ನು ಆಯಾ ಭಾಗದ ಪ್ರಾಧಿಕಾರದ ಪ್ರತಿನಿಧಿಗಳಿಗೆ ನೀಡಬೇಕು. ಪ್ರತಿನಿಧಿಗಳಿಗೆ ಯೋಜನೆ ಸಂಬಂಧ ಸಹಕರಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ನಾಗರಿಕರಿಗೂ ತಲುಪಿಸಲು ಕಾರ್ಯ ಕ್ರಮಗಳನ್ನು ಆಯೋಜಿಸಿ ವ್ಯಾಪಕ ಪ್ರಚಾರ ಮಾಡಿ ಅರಿವು ಮೂಡಿಸಲಾಗುತ್ತಿದೆ. ಯುವ ಜನತೆಗೆ ಉದ್ಯೋಗ ಸೃಷ್ಠಿಸಿ ಹಾಗೂ ಸ್ವಾವಲಂಭಿ ಬದುಕು ನಿರ್ಮಿಸಿಕೊಡುವ ಉದ್ದೇಶದಿಂದ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ತರಬೇತಿ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಕ್ರಮವಹಿಸಲಾಗುತ್ತಿದೆ ಎಂದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಭಿತ್ತಿ ಪತ್ರಗಳು ಹಾಗೂ ಬ್ಯಾನರ್‌ಗಳನ್ನು ಆಳವಡಿಸಿ ಯೋಜನೆಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿ ಉಪಾಧ್ಯಕ್ಷ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.17 ಕೆಸಿಕೆಎಂ 2ಜಿಲ್ಲಾ ಪಂಚಾಯಿತಿಯ ಗ್ಯಾರಂಟಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Share this article