- ಹೈಸ್ಕೂಲ್ ಮೈದಾನದಲ್ಲಿ ಜುಂಬಾ ಡ್ಯಾನ್ಸ್‌ಗೆ ಚಾಲನೆ ನೀಡಿ ಜಿಪಂ ಸಿಇಒ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್ ಹೇಳಿದರು.ನಗರದ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಜುಂಬಾ ಡ್ಯಾನ್ಸ್‌ಗೆ ಚಾಲನೆ ನೀಡಿ ಮಾತನಾಡಿದರು. ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ಈ ಬಾರಿ ದಾಖಲೆ ಪ್ರಮಾಣದ ಮತದಾನ ಮಾಡಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ ಎಂದರು.
ಗ್ರಾಮೀಣ ಭಾಗದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಆದರೆ, ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ, ನಗರ ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ, ಪ್ರತಿಯೊಬ್ಬ ಮತದಾರರೂ ಮತದಾನ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬೇಕು. ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಅಡಿಯಲ್ಲಿ ನಾವು ಪ್ರತಿಯೊಬ್ಬರಿಗೂ ತಲುಪಲು ಪ್ರಯತ್ನಿಸುತ್ತಿದ್ದೇವೆ. ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯವಾಗಿದ್ದು, ಏಪ್ರಿಲ್ 9ರಂದು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸೋಣ ಎಂದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಗೌಡರ್, ಮುಖ್ಯ ಯೋಜನಾ ನಿರ್ದೇಶಕ ಮಲ್ಲಾ ನಾಯಕ್, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
-24ಕೆಡಿವಿಜಿ38, 39: