ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಸ್ವಾತಂತ್ರ್ಯ ದಿನಾಚರಣೆಯಂತಹ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸಿದರೆ, ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೇರವೇರಿಸುವರು. ಆದರೆ, ತಾಲೂಕು ಕೇಂದ್ರದಲ್ಲಿ ಸಚಿವರು ಧ್ವಜಾರೋಹಣ ಮಾಡಿದ ಉದಾಹರಣೆಯೇ ಇಲ್ಲ. ಉಪಮುಖ್ಯಮಂತ್ರಿಯಾಗಿ ತಾಲೂಕು ಕೇಂದ್ರದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಮುಂದಾಗಿದ್ದಾರೆ.
ಎಚ್‌ಡಿಕೆಗೆ ಠಕ್ಕರ್ ಕೊಡುವ ತಂತ್ರ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಮುಂದಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ರಾಜಕೀಯ ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸುವ ಎಚ್‌ಡಿಕೆಗೆ ಠಕ್ಕರ್ ನೀಡಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆಂ ಚರ್ಚೆಗಳೂ ಸಹ ತಾಲೂಕಿನಲ್ಲಿ ಆರಂಭವಾಗಿದೆ.
ಕಳೆದ ೬ ವರ್ಷಗಳಿಂದ ಶಾಸಕರಾಗಿದ್ದ ಎಚ್.ಡಿ.ಕುಮಾರಸ್ವಾಮಿ ಒಂದೇ ಒಂದು ರಾಷ್ಟ್ರೀಯ ಹಬ್ಬಗಳಲ್ಲಿ ಪಾಲ್ಗೊಂಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಎಚ್‌ಡಿಕೆ ರಾಜೀನಾಮೆ ನೀಡಿ ಕ್ಷೇತ್ರ ತೆರವಾಗುತ್ತಿರುವಂತೆ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಲು ಬರುತ್ತಿರುವುದು ರಾಜಕೀಯ ಮಹತ್ವ ಪಡೆದಿದ್ದು, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದತ್ತ ಎಲ್ಲರ ಚಿತ್ತ ನೆಟ್ಟಿದೆ.ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದ ಶಾಸಕರಾಗಿದ್ದು, ಸ್ವಕ್ಷೇತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಲು ಮುಂದಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.