ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಹೋರಾಟಗಾರರನ್ನು ಸ್ಮರಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದೆ. ಯಾವುದೇ ಅಚಾತುರ್ಯ ಉಂಟಾಗದಂತೆ ಎಚ್ಚರಿಕೆ ವಹಿಸಿ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ನಡೆಸಬೇಕಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ, ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಉಪಾಹಾರ ಹಾಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಯೋಧರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿ ಇಲಾಖೆಯವರು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ತಾಲೂಕು ಕ್ರೀಡಾಂಗಣದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ೬ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೊಲೀಸ್ ಇಲಾಖೆ ಪರೇಡ್‌ಗೆ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಿ ಸಜ್ಜುಗೊಳಿಸಬೇಕು. ಸಮಾರಂಭ ನಡೆಯುವ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸಿರುವ ಸಾಧಕರಿಗೆ ಸನ್ಮಾನ ವಿಚಾರದಲ್ಲಿ ಲೋಪ ಉಂಟಾಗದಂತೆ ಹಾಗೂ ಯಾವುದೇ ಒತ್ತಡಕ್ಕೆ ಮಣಿಯದೆ ಅರ್ಹರನ್ನು ಸನ್ಮಾನಿಸಬೇಕಿದೆ. ಸಮಾರಂಭವನ್ನು ಶಿಸ್ತುಬದ್ಧ, ಅರ್ಥಪೂರ್ಣವಾಗಿ ಆಚರಿಸುವಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ಸಲಹೆ, ಸೂಚನೆಗಳನ್ನು ನೀಡಿದರು.
ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿ, ಎಲ್ಲ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ಪರಸ್ಪರ ಸಮನ್ವಯದಿಂದ, ಸಮರ್ಪಕವಾಗಿ ನಿರ್ವಹಿಸಿ, ಕಾರ್ಯಕ್ರಮದಲ್ಲಿ ಲೋಪಗಳಾಗದಂತೆ ಎಚ್ಚರವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ತಪ್ಪದೆ ಭಾಗವಹಿಸುವಂತೆ ಶಾಸಕರು ಸೂಚನೆ ನೀಡಿದರು.ತಹಸೀಲ್ದಾರ್ ಜೆ.ಎಸ್.ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್, ಪುರಸಭಾಧ್ಯಕ್ಷ ಸಿ. ಎನ್.ಮೋಹನ್, ನಗರ ಠಾಣಾ ಪೊಲೀಸ್ ಉಪ ಆರಕ್ಷಕ ಎಸ್. ಕೆ.ಮಲ್ಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಆರ್.ತ್ಯಾಗರಾಜು, ಸಿಡಿಪಿಒ ಇಂದ್ರ, ಬಿಆರ್‌ಸಿ ಕೆ.ಎನ್.ಅನಿಲ್. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ತಾಲೂಕು ಮಟ್ಟದ ಅಧಿಕಾರಿಗಳು, ಸಂಘಟನೆಗಳ ಮುಖಂಡರು ಇದ್ದರು.