ಬಳ್ಳಾರಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಸಮುದಾಯದ ಫಲಾನುಭವಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯಗಳು ಮತ್ತು ಯೋಜನೆ ತಲುಪಿಸುವಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ತೋರುವಂತಿಲ್ಲ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಹೇಳಿದರು.
ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ. ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಸ್ವಯಂ ಉದ್ಯೋಗ ಯೋಜನೆ ಹಾಗೂ ಇತರ ಸಹಾಯಧನಗಳು ಸಕಾಲದಲ್ಲಿ ದೊರೆಯುವಂತಾಗಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಅಥವಾ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅರ್ಹ ಬಡ ಮತ್ತು ಮಧ್ಯಮ ವರ್ಗದ ಭೋವಿ ಸಮುದಾಯದ ಜನರು ನಿಗಮದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಪಾರದರ್ಶಕವಾಗಿ ಹಾಗೂ ತ್ವರಿತಗತಿಯಲ್ಲಿ ಸೌಲಭ್ಯ ಒದಗಿಸಲು ಅಧಿಕಾರಿಗಳು ಶ್ರಮಿಸಬೇಕು. ನಿಗಮವಿರುವ ಜಿಲ್ಲೆಗಳಲ್ಲಿ ಯೋಜನೆಗಳ ಬಗ್ಗೆ ಸಮುದಾಯದವರಿಗೆ ಸರಿಯಾದ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದರು.ಬಡವರು ಮತ್ತು ಹಿಂದುಳಿದ ವರ್ಗದವರಿಗಾಗಿ ಸರ್ಕಾರ ರೂಪಿಸಿರುವ ವಿವಿಧ ಸಾಲ ಮತ್ತು ಸ್ವಯಂ ಉದ್ಯೋಗ ಯೋಜನೆ ಜನರಿಗೆ ಯಶಸ್ವಿಯಾಗಿ ತಲುಪಿಸಲು ಬ್ಯಾಂಕ್‌ಗಳ ಸಹಕಾರ ಅತ್ಯಗತ್ಯವಾಗಿದ್ದು, ಲೀಡ್ ಬ್ಯಾಂಕ್ ಮತ್ತು ಇತರೆ ಬ್ಯಾಂಕ್‌ಗಳು ನಿಯಮ ಸಡಿಲಿಸಿ ಮಾನವೀಯ ದೃಷ್ಟಿಯಿಂದ ಅರ್ಹ ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ತಿಳಿಸಿದರು.
ಸಾಲ-ಸೌಲಭ್ಯಕ್ಕಾಗಿ ಕೆಲವು ಅರ್ಜಿಗಳು ಮತ್ತು ಪ್ರಸ್ತಾವನೆಗಳು ತಡವಾಗಿ ಬಂದಿದ್ದು, ಬಾಕಿ ಇರುವ ಪ್ರಕರಣ ಶೀಘ್ರ ವಿಲೇವಾರಿ ಮಾಡಲು ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಮಾಹಿತಿ ರವಾನಿಸಲಾಗಿದೆ. ಮುಂಬರುವ ಡಿಸಿಸಿ, ಡಿಎಎಲ್‌ಆರ್‌ಸಿ ಸಭೆಯಲ್ಲಿ ಫಲಾನುಭವಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅರುಣ್ ಕುಮಾರ್, ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಮಾ, ಕೇಂದ್ರ ಕಚೇರಿಯ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಉಪ ಅಧೀಕ್ಷಕ ರಘು, ಬಳ್ಳಾರಿ ನಗರ ಡಿವೈಎಸ್ಪಿ ಗೋವಿಂದರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಭೋವಿ ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.