- ಸಾಲ ವಸೂಲಾತಿ ಹೆಸರಲ್ಲಿ ಕಿರುಕುಳ ನೀಡಿದರೆ ಕಠಿಣ ಕ್ರಮಕ್ಕೆ ಡಿಸಿಗೆ ಸೂಚನೆ: ಸಚಿವ ಕೆ.ಎಸ್.ಬಸವಂತಪ್ಪ - - -
ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಜಿಲ್ಲೆಯಲ್ಲೂ ಮಳೆಯ ಕೊರತೆಯಿಂದಾಗಿ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಂದ ಬಲವಂತ ಹಾಗೂ ಒತ್ತಾಯ ಪೂರ್ವಕವಾಗಿ ಸಾಲ ವಸೂಲಾತಿಯನ್ನು ಸಹಕಾರ ಸಂಘಗಳು ಸೇರಿದಂತೆ ಯಾವುದೇ ಬ್ಯಾಂಕ್, ಹಣಕಾಸು ಸಂಸ್ಥೆಗಳು ಮಾಡಬಾರದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ನಗರದ ಎಂಸಿಸಿ ಬಿ ಬ್ಲಾಕ್‌ನ ಡಾ.ಸದ್ಯೋಜಾತ ಸ್ವಾಮಿಗಳ ಹಿರೇಮಠದಲ್ಲಿ ಶನಿವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸೇರಿದಂತೆ ವಿವಿಧ ಸಹಕಾರ ಸಂಘ-ಸಂಸ್ಥೆಗಳಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು. ಈಗಿನ ಬರ ಪರಿಸ್ಥಿತಿಯಲ್ಲಿ ರೈತರಿಂದ ಬಲವಂತ, ಒತ್ತಾಯಪೂರ್ವಕ ಸಾಲ ವಸೂಲಾತಿ ಬೇಡ ಎಂದರು.ರೈತರಿಗೆ ಆರ್ಥಿಕ ನೆರವನ್ನು ಕಲ್ಪಿಸಿ ಸ್ವಾವಲಂಬಿಯಾಗಿಸಲು ಸಹಕಾರ ಸಂಘಗಳು ಸ್ಥಾಪನೆಯಾಗಿವೆ. ಆದರೆ, ಮಳೆ ಇಲ್ಲದೇ ಬೆಳೆ ಕೈಕೊಟ್ಟಿದ್ದು, ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳೂ ಬತ್ತುತ್ತಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಸಹಕಾರ ಸಂಘಗಳು ಮಾನವೀಯತೆ ತೋರಬೇಕು. ಕನಿಷ್ಠ ಈ ವರ್ಷವಾದರೂ ರೈತರಿಂದ ಬಲವಂತವಾಗಿ ಸಾಲ ಮರುಪಾವತಿ ಮಾಡಿಸಿಕೊಳ್ಳಬಾರದು ಎಂದು ತಿಳಿಸಿದರು.
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಬರಗಾಲದಲ್ಲಿ ರೈತರಿಂದ ಸಾಲ ವಸೂಲಿ ಮಾಡುವಾಗ ಸಹಕಾರ ಸಂಘಗಳು ತಾಯಿಯ ಮನಸ್ಸಿನಿಂದ ವರ್ತಿಸಬೇಕು. 2001ರಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆರಂಭವಾದಾಗ ಅಂದಿನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ 30 ಕೋಟಿ ರು. ಅನುದಾನ ಕೊಡಿಸಿದ್ದರು. ರೈತರ ಹಿತದೃಷ್ಟಿಯಿಂದ ಹೊಸ ಯೋಜನೆಗಳನ್ನು ರೂಪಿಸಬೇಕು. ರೈತರು, ಮಹಿಳೆಯರು ಹಾಗೂ ಯುವಜನರಿಗೆ ಪ್ರೋತ್ಸಾಹಿಸುವ ಯೋಜನೆ ಜೊತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಕಲ್ಪಿಸಿ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಜೆ.ಆರ್.ಷಣ್ಮುಖಪ್ಪ ಮಾತನಾಡಿ, ಕೇಂದ್ರದಲ್ಲಿ ಸಹಕಾರ ಸಚಿವಾಲಯ ಸ್ಥಾಪನೆಯಾದ ಹಿನ್ನೆಲೆ ಜೂ.29ರಿಂದ ಜು.6 ರವರೆಗೆ ಸಹಕಾರ ಸಪ್ತಾಹ ಆಚರಿಸುವಂತೆ ಸೂಚಿಸಿರುವುದು ಸರಿಯಲ್ಲ. ಹೆಸರು ಅಥವಾ ದಿನಾಂಕ ಬದಲಾವಣೆಯಿಂದ ಸಹಕಾರ ಚಳವಳಿಯ ಉದ್ದೇಶವಂತೂ ಈಡೇರುವುದಿಲ್ಲ. ಹಿಂದಿನಿಂದಲೂ ನಮ್ಮಲ್ಲಿ ಹಿರಿಯರು ಆಚರಿಸಿಕೊಂಡು ಬಂದಂತೆ ನ.14ರಿಂದಲೇ ಸಹಕಾರ ಸಪ್ತಾಹ ಆಚರಿಸುವುದು ಸೂಕ್ತ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 1,541 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
- - -
ದಾವಣಗೆರೆಯಲ್ಲಿ ಶನಿವಾರ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಸಚಿವ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಜೆ.ಆರ್.ಷಣ್ಮುಖಪ್ಪ, ಸಿರಿಗೆರೆ ರಾಜಣ್ಣ, ಕುಮಾರ ಇತರರು.