ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸಂಘಟನಾತ್ಮಕ ಚಟುವಟಿಕೆಗಳನ್ನು ಪಾರದರ್ಶಕವಾಗಿ ನಡೆಸಿಕೊಂಡು ಬರುತ್ತಿದ್ದು, ಕಾಲಕಾಲಕ್ಕೆ ರಾಜ್ಯ ಸಮಿತಿ ಸಭೆ ಹಾಗೂ ವಾರ್ಷಿಕ ಮಹಾಸಭೆಗಳನ್ನು ನಡೆಸಲಾಗುತ್ತಿದೆ. ತಗಡೂರು ಅವರ ಅವಧಿಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ೧ ಕೋಟಿ ಠೇವಣಿ ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ದೊರಕಿಸಿಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿದ್ದಲಿಂಗಸ್ವಾಮಿ ಹೇಳಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ದರುದ್ದೇಶಪೂರ್ವಕವಾಗಿ ಸುಳ್ಳು ದೂರುಗಳನ್ನು ನೀಡಲಾಗುತ್ತಿದೆ. ಇದಕ್ಕೆ ಮಾನ್ಯತೆ ನೀಡಬಾರದು ಎಂದು ಆಗ್ರಹಿಸಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಡಳಿತದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿ ಈ ದೂರುಗಳಿಗೆ ಮಾನ್ಯತೆ ನೀಡಬಾರದು ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಎನ್. ಸಿದ್ದಲಿಂಗಸ್ವಾಮಿ ಮಾತನಾಡಿ, ಖ್ಯಾತ ಸಾಹಿತಿ ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ೯೫ ವರ್ಷಗಳ ಇತಿಹಾಸವಿದೆ. ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಘಟಕಗಳನ್ನು ಹೊಂದಿರುವ ಬೃಹತ್ ಸಂಘಟನೆಯಾಗಿದೆ. ಚುನಾವಣಾ ಪ್ರಕ್ರಿಯೆ ಮೂಲಕ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಇತ್ತೀಚೆಗೆ ಸ್ವಯಂಘೋಷಿತ ಸಂಘಟನೆಯೊಂದರ ಮೂಲಕ ವಿವಿಧೆಡೆ ದೂರುಗಳನ್ನು ನೀಡಲಾಗುತ್ತಿದ್ದು ಇದು ಖಂಡನೀಯ ಎಂದು ಆಕ್ಷೇಪಿಸಿದರು.
ಶಿವಾನಂದ ತಗಡೂರು ಅವರು ರಂಗಭೂಮಿ ಕ್ಷೇತ್ರದಿಂದ ಬೆಳೆದು ಬಂದಿದ್ದು, ನಾಟಕ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸಂಘಟನಾತ್ಮಕ ಚಟುವಟಿಕೆಗಳನ್ನು ಪಾರದರ್ಶಕವಾಗಿ ನಡೆಸಿಕೊಂಡು ಬರುತ್ತಿದ್ದು, ಕಾಲಕಾಲಕ್ಕೆ ರಾಜ್ಯ ಸಮಿತಿ ಸಭೆ ಹಾಗೂ ವಾರ್ಷಿಕ ಮಹಾಸಭೆಗಳನ್ನು ನಡೆಸಲಾಗುತ್ತಿದೆ. ತಗಡೂರು ಅವರ ಅವಧಿಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ೧ ಕೋಟಿ ಠೇವಣಿ ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ ೫ ಲಕ್ಷ ಪರಿಹಾರ ದೊರಕಿಸಿಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿದ್ದಲಿಂಗಸ್ವಾಮಿ ಹೇಳಿದರು.
ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಸಹಯೋಗ ಹೊಂದಿರುವ ಹಾಗೂ ಸರ್ಕಾರದ ಮಾನ್ಯತೆ ಪಡೆದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾಯಿತ ಅಧ್ಯಕ್ಷರ ವಿರುದ್ಧ ನೀಡಲಾಗಿರುವ ದೂರುಗಳನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ದುರುದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ರಾಜ್ಯ ಸಮಿತಿ ಸದಸ್ಯರಾದ ಮಹೇಂದ್ರ, ಹಿರಿಯ ಪತ್ರಕರ್ತರು, ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು.
--------
೪ಸಿಎಚ್‌ಎನ್೧
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಿರುದ್ಧದ ದೂರುಗಳಿಗೆ ಮಾನ್ಯತೆ ನೀಡಬಾರದು ಎಂದು ಆಗ್ರಹಿಸಿ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.