ಬುಡಕಟ್ಟು ಪರಿಶಿಷ್ಟ ಪಂಗಡಕ್ಕೆ ಸೌಲಭ್ಯ ಕಲ್ಪಿಸಲು ಉದಾಸೀನ ಬೇಡ

KannadaprabhaNewsNetwork |  
Published : May 19, 2026, 01:15 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್   | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜನ್ ಭಾಗೀದಾರಿ-ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಅಭಿಯಾನದಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪುಷ್ಪನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬುಡಕಟ್ಟು ಪರಿಶಿಷ್ಟ ಪಂಗಡ ಸಮುದಾಯಳಿಗೆ ಸರ್ಕಾರಿ ಸೌಲಭ್ಯ ಕಲ್ಪಿಸುವಲ್ಲಿ ಉದಾಸೀನ ಬೇಡವೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಜನ್ ಭಾಗೀದಾರಿ-ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಅಭಿಯಾನದಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮಾಹಿತಿ ಕೊರತೆಯಿಂದಾಗಿ ಸರ್ಕಾರದ ಸೌಲಭ್ಯಗಳು ಬುಡಕಟ್ಟು ಪರಿಶಿಷ್ಟ ಪಂಗಡದ ಜನರಿಗೆ ತಲುಪದೇ ಇರಬಾರದು. ಪ್ರತಿಯೊಂದು ಇಲಾಖೆಯೂ ಜವಾಬ್ದಾರಿಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳ ಪೂರ್ಣ ಮಾಹಿತಿ ಜನರಿಗೆ ಸಿಗುವಂತಾಗಲು ಇಲಾಖಾ ಮಟ್ಟದಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ದಿವಾಕರ್ ಮಾತನಾಡಿ, ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18ರಿಂದ ಮೇ 25ರವರೆಗೆ ‘ಜನ್ ಭಾಗೀದಾರಿ- ಸಬ್ಸೆ ಡೋರ್, ಸಬ್ಸೆ ಪೆಹ್ಲೆ” ಎಂಬ ಐಇಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮ ಮಟ್ಟದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ಬುಡಕಟ್ಟು ಜನರಲ್ಲಿ ಕಂಡುಬರುವ ಸಿಕಲ್ ಸೆಲ್ ಅನೀಮಿಯಾ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಇದರೊಂದಿಗೆ ಪ್ರಮುಖವಾಗಿ ಪ್ರಧಾನಮಂತ್ರಿ ಜನಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಕಳೆದ ಬಾರಿ ಈ ಕಾರ್ಯಕ್ರಮವನ್ನು 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಏಳು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಶಿಕ್ಷಣ, ಆರೋಗ್ಯ, ಪಶುಸಂಗೋಪನೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸಿಗುವ ಸೌಲಭ್ಯಗಳು ಮತ್ತು ಯೋಜನೆಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನು ವಿವಿಧ ಇಲಾಖೆ ಅಧಿಕಾರಿಗಳು ಮಾಡಬೇಕಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ಗಿರೀಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವರಾಜ್, ನಾಸೀರ್ ಉದ್ದೀನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ದಿನೇಶ್, ಚನ್ನಬಸಪ್ಪ, ಗೋಪಾಲಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಪೋಲು
ರೈತ ಕುಟುಂಬದಿಂದ ಬೆಳೆದು ದೇಶಕ್ಕೆ ಪ್ರಧಾನಿಯಾದವರು