ಕನ್ನಡಪ್ರಭ ವಾರ್ತೆ ಮೂಡಲಗಿರೈತರ ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಸಂಕಷ್ಟದಲ್ಲಿರುವ ರೈತರ ಸಮಸ್ಯೆಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ, ಶೀಘ್ರ ಪರಿಹಾರ ಕಲ್ಪಿಸುವ ಮೂಲಕ ರೈತರ ಮುಖದಲ್ಲಿ ಸಂತಸ ಮೂಡಿಸಬೇಕು ಎಂದು ಮುಗಳಖೋಡದ ಜಿಡಗಾ ಮಠದ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಮೂಡಲಗಿ
ರೈತರ ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಸಂಕಷ್ಟದಲ್ಲಿರುವ ರೈತರ ಸಮಸ್ಯೆಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ, ಶೀಘ್ರ ಪರಿಹಾರ ಕಲ್ಪಿಸುವ ಮೂಲಕ ರೈತರ ಮುಖದಲ್ಲಿ ಸಂತಸ ಮೂಡಿಸಬೇಕು ಎಂದು ಮುಗಳಖೋಡದ ಜಿಡಗಾ ಮಠದ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಆಗ್ರಹಿಸಿದರು.
ತಾಲೂಕಿನ ಗುರ್ಲಾಪುರದಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕೆಂದು ಆಗ್ರಹಿಸಿ ರೈತರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಅವರು ಮಾತನಾಡಿದರು.
“ನಾನು ಯಾವುದೇ ಸರ್ಕಾರವನ್ನು ಟೀಕಿಸುತ್ತಿಲ್ಲ. ದುಡಿಯುವ ರೈತರ ಕೈಗಳಿಗೆ ಸರ್ಕಾರ ಬಲ ತುಂಬಬೇಕು ಎನ್ನುವುದೇ ನನ್ನ ಆಶಯ. ರೈತರ ಹೋರಾಟಕ್ಕೆ ನನ್ನ ಬೆಂಬಲ ಸದಾ ಇರಲಿದೆ,” ಎಂದು ಭರವಸೆ ನೀಡಿದರು.
ರೈತ ಮುಖಂಡರಾದ ಚುನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಅವರ ಒಗ್ಗಟ್ಟು ಮತ್ತು ಸಂಘಟಿತ ಹೋರಾಟದಿಂದಾಗಿ ಕಳೆದ ವರ್ಷದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಯಿತು. ಈ ಬಾರಿಯೂ ರೈತರಿಗೆ ಖಂಡಿತ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಮಾತನಾಡಿದರು. ಧರಣಿಯಲ್ಲಿ ಭಾಗೋಜಿ, ಮುನ್ಯಾಳದ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ, ಹನಮಂತ ಮಹಾರಾಜರು, ಗೋಕಾಕದ ಅಶೋಕ ಪೂಜೇರಿ, ಸತ್ತಿಗೇರಿ ಶ್ರೀಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಠಾಧೀಶರು, ರೈತ ಮುಖಂಡರು, ವಕೀಲರು, ಮಾಜಿ ಸೈನಿಕರು ಹಾಗೂ ಅಪಾರ ಸಂಖ್ಯೆಯ ರೈತರು ಪಾಲ್ಗೊಂಡಿದ್ದರು.
ಸರ್ಕಾರವು ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು. ದೇಶದ ರೈತರು ಸಂತೋಷದಿಂದ ಬದುಕಿದಾಗ ಮಾತ್ರ ಭಾರತವನ್ನು ವಿಶ್ವಗುರುವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಲು ಸಾಧ್ಯ. ರೈತರ ಬದುಕು ಉನ್ನತ ಮಟ್ಟಕ್ಕೆ ಏರಬೇಕು. ಆದರೆ, ಇಂದಿನ ಪರಿಸ್ಥಿತಿಯಲ್ಲಿ ರೈತರ ಕಣ್ಣಲ್ಲಿ ರಕ್ತ ಬರುವಂತಾಗಿದೆ. ಮಳೆಯ ಕೊರತೆಯಿಂದ ಕಬ್ಬಿನ ಬೆಳೆ ಹಾಳಾಗುತ್ತಿದ್ದು, ಕಬ್ಬಿಗೆ ಸೂಕ್ತ ದರ ನಿಗದಿಪಡಿಸಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ. ಇದರಿಂದಾಗಿ ರೈತರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.