ಚಿತ್ರದುರ್ಗ: ಗುಡುಗು, ಸಿಡಿಲು ಅಬ್ಬರದ ವೇಳೆ ಮೊಬೈಲ್ ಬಳಸುವುದು ಬೇಡ. ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾರ್ವಜನಿಕರಿಲ್ಲಿ ಮನವಿ ಮಾಡಿದ್ದಾರೆ.
ಗುಡುಗು, ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.
ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು, ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ. ಅರಣ್ಯ ಪುದೇಶದಲ್ಲಿದ್ದರೆ ಸಣ್ಣ ಮತ್ತು ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕ್‌ಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳ ಬಳಕೆ ಬೇಡ. ಕಬ್ಬಿಣದ ಸರಕುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು.ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು. ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು.
ವ್ಯಕ್ತಿಯಲ್ಲಿ ಉಸಿರಾಟ ಕಂಡು ಬರದಿದ್ದಲ್ಲಿ ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತ ಕಂಡು ಬರದಿದ್ದಲ್ಲಿ cardiac compression ಹಾಗೂ Cardiopulmonary Resuscition ಪ್ರಕ್ರಿಯೆ ಪ್ರಾರಂಭಿಸಬೇಕು. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಕಣ್ಣಿನ ದೃಷ್ಟಿ, ಕಿವಿ ಕೇಳಿಸುವಿಕೆ ಹಾಗೂ ಮೂಳೆಗಳು ಮುರಿದಿವೆಯೇ ಎಂದು ಪರೀಕ್ಷಿಸಬೇಕು. ಇದರಿಂದ ಪಾಶ್ರ್ವವಾಯು, ಲಕ್ವಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.